(ನ್ಯೂಸ್ ಕಡಬ) newskadaba.com, ಫೆ.01 : ನವದೆಹಲಿ: ಮುಂದಿನ ಮೂರು ವರ್ಷಗಳಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಅನುಕೂಲ ಮಾಡಿಕೊಡಲಿದೆ ಮತ್ತು ಇವುಗಳಲ್ಲಿ 200 ಕೇಂದ್ರಗಳನ್ನು ಈ ಆರ್ಥಿಕ ವರ್ಷದಲ್ಲಿಯೇ ಸ್ಥಾಪಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಪ್ರಕಟಿಸಿದ್ದಾರೆ.
2025-26ರ ಕೇಂದ್ರ ಬಜೆಟ್ ಮಂಡಿಸಿದ ಅವರು, ಗಿಗ್ ಕಾರ್ಮಿಕರಿಗೆ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (ಪಿಎಂ-ಜೆಎವೈ) ಅಡಿಯಲ್ಲಿ ಆರೋಗ್ಯ ಸೌಲಭ್ಯಗಳನ್ನು ಒದಗಿಸಲಾಗುವುದು. ಈ ಕ್ರಮವು ಸುಮಾರು 1 ಕೋಟಿ ಕಾರ್ಮಿಕರಿಗೆ ಸಹಾಯ ಮಾಡುವ ಸಾಧ್ಯತೆಯಿದೆ ಎಂದು ಹೇಳಿದರು.
ಮುಂದಿನ ಐದು ವರ್ಷಗಳಲ್ಲಿ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ 75,000 ಸೀಟುಗಳನ್ನು ಸೇರಿಸುವ ಗುರಿಯನ್ನು ಹೊಂದಿದ್ದು, ಈ ವರ್ಷ 10,000 ಹೆಚ್ಚುವರಿ ಸೀಟುಗಳನ್ನು ಸೇರಿಸಲಾಗುವುದು. ನಮ್ಮ ಸರ್ಕಾರವು ಕಳೆದ 10 ವರ್ಷಗಳಲ್ಲಿ ಸುಮಾರು 1.1 ಲಕ್ಷ ಪದವಿಪೂರ್ವ ಮತ್ತು ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಸೀಟುಗಳನ್ನು ಸೇರಿಸಿದೆ. ಇದು ಶೇ. 130 ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದರು.
ಮುಂದಿನ ಮೂರು ವರ್ಷಗಳಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಅನುಕೂಲ ಮಾಡಿಕೊಡಲಿದೆ. ಈ ಪೈಕಿ 2025-26ರಲ್ಲಿಯೇ 200 ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದರು.