(ನ್ಯೂಸ್ ಕಡಬ) newskadaba.com ಕಡಬ, ಜು.03. ಕಾಂಪೋಸ್ಟ್ ಪೈಪ್ ಖರೀದಿಯಲ್ಲಿ ಅವ್ಯವಹಾರ ನಡೆಸಿದ ಆರೋಪದಲ್ಲಿ ಇಲ್ಲಿನ ಕುಟ್ರುಪ್ಪಾಡಿ ಗ್ರಾ.ಪಂ. ಅಧ್ಯಕ್ಷರು ಹಾಗೂ ಈ ಹಿಂದಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ ಪ್ರಕರಣ ದಾಖಲಿಸಿಕೊಂಡಿದೆ.
ನಿರ್ಮಲ ಗ್ರಾಮ ಪುರಸ್ಕಾರ ಯೋಜನೆಯಡಿ 2015-16ನೇ ಸಾಲಿನಲ್ಲಿ ಪೈಪ್ ಕಾಂಪೋಸ್ಟ್ ಘಟಕ ಆರಂಭಿಸಲು ಗ್ರಾಮದ ವ್ಯಾಪ್ತಿಗೊಳಪಟ್ಟ ಆಯ್ದ ಫಲಾನುಭವಿಗಳಿಗೆ ವಿತರಿಸುವುದಕ್ಕಾಗಿ ಖರೀದಿ ಮಾಡಲಾಗಿದ್ದ ಸಿಮೆಂಟ್ ಕಾಂಪೋಸ್ಟ್ ಪೈಪ್ ಗಳಲ್ಲಿ ಆರ್ಥಿಕ ಅವ್ಯವಹಾರ ನಡೆದಿದೆಯೆಂದು ಗ್ರಾ.ಪಂ. ಮಾಜಿ ಸದಸ್ಯ ಕ್ಸೇವಿಯರ್ ಬೇಬಿಯವರು ಮಂಗಳೂರಿನ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳು ನ್ಯಾಯಾಲಯದ ಅನುಮತಿ ಪಡೆದುಕೊಂಡಿದ್ದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಗ್ರಾ.ಪಂ. ಅಧ್ಯಕ್ಷೆ ಜಾನಕಿ ಹಾಗೂ 2015-16ರಲ್ಲಿ ಗ್ರಾಮ ಪಂಚಾಯತಿನ ಅಭಿವೃದ್ಧಿ ಅಧಿಕಾರಿಯಾಗಿದ್ದ ವಸಂತಿಯವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.