(ನ್ಯೂಸ್ ಕಡಬ) newskadaba.com ಮಾ. 01 ಬೆಂಗಳೂರು: ರಾಜ್ಯಗಳ ತೆರಿಗೆ ಹಂಚಿಕೆಯನ್ನು ಶೇ 41 ರಿಂದ ಶೇ 40 ಕ್ಕೆ ಕಡಿತಗೊಳಿಸಲು ಎನ್‌ಡಿಎ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದ್ದು. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತೆರಿಗೆ ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕಾಗುತ್ತಿರುವ ಅನ್ಯಾಯವನ್ನು ಮನವಿ-ಮಾತುಕತೆ ಮೂಲಕ ಪರಿಹರಿಸಲು ನಡೆಸುತ್ತಿರುವ ಪ್ರಯತ್ನ ವಿಫಲವಾದಲ್ಲಿ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ರಾಜ್ಯಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ತೆರಿಗೆ ಪಾಲನ್ನು ಇನ್ನಷ್ಟು ಕಡಿತಗೊಳಿಸಲು ಕೇಂದ್ರ ಸರ್ಕಾರ ಮಾಡುತ್ತಿರುವ ಪ್ರಯತ್ನ ಕರ್ನಾಟಕ ವಿರೋಧಿ ಮಾತ್ರವಲ್ಲ, ಒಕ್ಕೂಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಾರುವ ಸಂವಿಧಾನಕ್ಕೆ ಕೂಡಾ ವಿರುದ್ಧವಾಗಿದೆ. ರಾಜ್ಯದ ತೆರಿಗೆ ಪಾಲನ್ನು ಶೇಕಡಾ 41ರಿಂದ 40ಕ್ಕೆ ಇಳಿಸಲು ಶಿಫಾರಸು ಮಾಡುವಂತೆ ಹಣಕಾಸು ಆಯೋಗಕ್ಕೆ ಕೇಂದ್ರದ ಎನ್‌ಡಿಎ ಸರ್ಕಾರ ಸಿದ್ಧತೆ ನಡೆಸಿದೆ ಎಂದು ವರದಿಯಾಗಿದೆ.