(ನ್ಯೂಸ್ ಕಡಬ) newskadaba.com, ಮಾ. 24: ಸಂವಿಧಾನ ಬದಲಿಸುವ ಕುರಿತ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯು ಪ್ರಜಾಪ್ರಭುತ್ವ ವಿರೋಧಿ ಹಾಗೂ ಸಂವಿಧಾನ ವಿರೋಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.


ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಂವಿಧಾನ ಬದಲಿಸಲು ಬಿಜೆಪಿ ಮತ್ತು ನರೇಂದ್ರ ಮೋದಿ ಜೀ ಅವರು ಅವಕಾಶ ಕೊಡುವುದಿಲ್ಲ ಎಂದು ತಿಳಿಸಿದರು. ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ಖಂಡಿಸುವುದಾಗಿ ಹೇಳಿದರು.ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷವು ಮುಸ್ಲಿಮರನ್ನು ಮತಬ್ಯಾಂಕ್ ಆಗಿ ಮಾಡಿಕೊಂಡಿದೆ. ರಾಜ್ಯದ- ದೇಶದ ಶೋಷಿತ, ಪೀಡಿತ ಸಮುದಾಯಗಳನ್ನು ಮತಬ್ಯಾಂಕಾಗಿ ಮಾಡಿಕೊಂಡು ಅವರನ್ನು ದುರುಪಯೋಗ ಪಡಿಸಿಕೊಂಡಿತ್ತು. ಇದು ಪದೇಪದೇ ಗೊತ್ತಾಗುತ್ತಿದೆ. ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಕೇವಲ ಅವರ ವೈಯಕ್ತಿಕವಲ್ಲ; ರಾಹುಲ್ ಗಾಂಧಿಯವರ, ಈ ರಾಜ್ಯದ ಮುಖ್ಯಮಂತ್ರಿಗಳ ಮನಸ್ಥಿತಿಯನ್ನೇ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ ಎಂದು ವಿಶ್ಲೇಷಿಸಿದರು. ಡಾ. ಬಾಬಾಸಾಹೇಬ ಅಂಬೇಡ್ಕರರಿಗೆ ಗೌರವ ಕೊಡುವ ಪಕ್ಷ ಬಿಜೆಪಿ. ಡಾ. ಅಂಬೇಡ್ಕರರಿಗೆ ಮತ್ತು ಸಂವಿಧಾನಕ್ಕೆ ಗೌರವ ಕೊಡುವವರು ಮಹಾನ್ ವ್ಯಕ್ತಿ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರು ಎಂದು ತಿಳಿಸಿದರು.