ನೀತಿ ಸಂಹಿತೆ ಜಾರಿಯಲ್ಲಿದ್ದರೂ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಪಡೆಯುವ ಅಗತ್ಯವಿಲ್ಲ ► ಜಿಲ್ಲಾಧಿಕಾರಿ ಡಾ| ಸಸಿಕಾಂತ್ ಸೆಂಥಿಲ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.02. ವಿಧಾನಸಭಾ  ಚುನಾವಣಾ ನೀತಿ ಸಂಹಿತಿ ಜಾರಿಯಲ್ಲಿದ್ದರೂ, ಖಾಸಗಿ ಸ್ಥಳಗಳಲ್ಲಿ ನಡೆಯುವ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಪಡೆಯಲು ಸಾರ್ವಜನಿಕರು ಅರ್ಜಿ ಸಲ್ಲಿಸಬೇಕಾದ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಅವರು ಸೋಮವಾರದಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಚುನಾವಣಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮದುವೆ, ಹುಟ್ಟುಹಬ್ಬ ಆಚರಣೆ ಸೇರಿದಂತೆ ರಾಜಕೀಯ ಉದ್ದೇಶವಿಲ್ಲದ ಖಾಸಗಿ ಕಾರ್ಯಕ್ರಮಗಳಿಗೆ ಚುನಾವಣಾಧಿಕಾರಿಗಳ ಅನುಮತಿ ಪಡೆಯಬೇಕಾಗಿಲ್ಲ. ಆದರೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಖಾಸಗಿ ಕಾರ್ಯಕ್ರಮಗಳಾದರೆ ಧ್ವನಿವರ್ಧಕ ಸೇರಿದಂತೆ ನಿಯಮಾನುಸಾರ ಪಡೆಯಬೇಕಾದ ಅನುಮತಿಗಳನ್ನು ಪಡೆಯಲೇಬೇಕು ಎಂದು ಅವರು ಹೇಳಿದರು. ಅಲ್ಲದೇ, ಯಕ್ಷಗಾನ ಸೇರಿದಂತೆ ರಾಜಕೀಯೇತರ ಸಾರ್ವಜನಿಕ ಕಾರ್ಯಕ್ರಮಗಳ ಆಯೋಜಕರು ಸದರಿ ಕಾರ್ಯಕ್ರಮವನ್ನು ಯಾವುದೇ ರಾಜಕೀಯ ಉದ್ದೇಶಕ್ಕೆ ನಡೆಸುತ್ತಿಲ್ಲ ಎಂದು ಡಿಕ್ಲರೇಷನನ್ನು ದಾಖಲೆಯೊಂದಿಗೆ ಚುನಾವಣಾಧಿಕಾರಿಗಳಿಗೆ ಅಥವಾ ಸ್ಥಳೀಯ ನಗರ ಸ್ಥಳೀಯ ಸಂಸ್ಥೆ/ಗ್ರಾ.ಪಂ ಅಥವಾ ಪೊಲೀಸ್ ಠಾಣೆಗೆ ಸಲ್ಲಿಸಬೇಕು. ಅನುಮತಿ ಪಡೆಯಲು ಅರ್ಜಿ ಸಲ್ಲಿಸಬೇಕಾಗಿಲ್ಲ ಎಂದು ಜಿಲ್ಲಾಧಿಕಾರಿಗಳು ವಿವರಿಸಿದರು.

Also Read  ಮಲ್ಪೆ: ಸ್ಮಶಾನದ ಬಳಿ ಮರಕ್ಕೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಸಾರ್ವಜನಿಕ ಕಾರ್ಯಕ್ರಮಗಳಿಗೆ ತ್ವರಿತವಾಗಿ ಅನುಮತಿ ನೀಡಲು ಸಹಕಾರವಾಗುವಂತೆ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಏಕಗವಾಕ್ಷಿ (ಸಿಂಗಲ್ ವಿಂಡೋ) ಕೊಠಡಿ ತೆರೆಯಲಾಗುವುದು. ಸಾರ್ವಜನಿಕರು ಅನುಮತಿ ಕೋರಿ ಜಿಲ್ಲಾಧಿಕಾರಿ ಕಚೇರಿಗೆ ಬರಬೇಕಾದ ಅಗತ್ಯವಿಲ್ಲ ಎಂದು ಡಾ. ಸಸಿಕಾಂತ್ ಸೆಂಥಿಲ್ ತಿಳಿಸಿದರು. ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಯಾಗುವಂತೆ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಗಮನಹರಿಸಬೇಕು. ಇದರಲ್ಲಿ ಯಾವುದೇ ರಾಜಿಗೆ ಅವಕಾಶವಿಲ್ಲ. ಫ್ಲೈಯಿಂಗ್ ಸ್ಕ್ವಾಡ್ ಮತ್ತು ಎಸ್‍ಎಸ್‍ಟಿ ತಂಡಗಳು ಪರಿಣಾಮಕಾರಿಯಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಮಂಗಳೂರು ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಮಾತನಾಡಿ, ಕಮಿಷನರೇಟ್ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಎಸಿಪಿ ದರ್ಜೆಯ ಅಧಿಕಾರಿಗಳನ್ನು ಪೊಲೀಸ್ ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಚುನಾವಣಾ ನಿಯಮಗಳ ಕಟ್ಟುನಿಟ್ಟಿನ ಜಾರಿಗೆ ಪ್ರತೀ ದಿನ ಪೊಲೀಸ್ ನೋಡಲ್ ಅಧಿಕಾರಿ ಮತ್ತು ಆಯಾ ಚುನಾವಣಾಧಿಕಾರಿಗಳು ಸಭೆ ನಡೆಸಲಿದ್ದಾರೆ ಎಂದು  ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಆರ್. ರವಿಕಾಂತೇಗೌಡ ಮಾತನಾಡಿ, ಜಿಲ್ಲಾ ಪೊಲೀಸ್ ವ್ಯಾಪ್ತಿಯ ಸರ್ಕಲ್ ಇನ್ಸ್‌ಪೆಕ್ಟರ್ ಗಳಿಗೆ ಆಯಾ ಕ್ಷೇತ್ರದ ಭದ್ರತೆಯ ಉಸ್ತುವಾರಿ ನೀಡಲಾಗಿದೆ. ಫ್ಲೆಯಿಂಗ್ ಸ್ಕ್ವಾಡ್‍ಗಳಿಗೆ ಎಎಸ್‍ಐ ಹಾಗೂ ಎಸ್‍ಎಸ್‍ಟಿ ತಂಡಗಳಲ್ಲಿ ಹೆಡ್ ಕಾನ್ಸ್‌ಟೇಬಲ್ಸ್ ಇರಲಿದ್ದಾರೆ ಎಂದು ಹೇಳಿದರು.

Also Read  ನಾಲ್ವರು ಮುಸುಕುಧಾರಿಗಳಿಂದ ಅಪಾರ್ಟ್ ಮೆಂಟ್‌ಗೆ ನುಗ್ಗಲು ಯತ್ನ

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವೈಶಾಲಿ, ಡಿಸಿಪಿ ಹನುಮಂತರಾಯ, ಅಪರ ಎಸ್‍ಪಿ ಸಜೀತ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!
Scroll to Top