(ನ್ಯೂಸ್ ಕಡಬ) newskadaba.com ಜೂ. 26. ರಸ್ತೆಗಳಲ್ಲಿ ಮತ್ತು ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸದ ರಾಶಿಗಳು, ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳು ಪರಿಸರ ಹಾಗೂ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಸಿಎಂ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿ ಸೂಚನೆಗಳನ್ನು ನೀಡಿ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಆದೇಶ ಹೊರಡಿಸಿದ್ದಾರೆ.
ಆದೇಶದ ಪ್ರಕಾರ, ಪರಿಸರ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 5ರ ಅಡಿಯಲ್ಲಿ ಹಾಗೂ plastic waste management rules, 2016 (Amended in 2021) ಇದರ ಅನ್ವಯ ಕ್ಯಾರಿ ಬ್ಯಾಗ್ ಇತ್ಯಾದಿಗಳಲ್ಲಿ 120 ಮೈಕ್ರಾನ್‌ಗಿಂತ ಕಡಿಮೆ ಗಾತ್ರದ ಕೆಲವು ಏಕ ಬಳಕೆಯ ಪ್ಲಾಸ್ಟಿಕ್ (Single Use Plastic -SUP) ವಸ್ತುಗಳ ಉತ್ಪಾದನೆ, ಮಾರಾಟ, ಸಂಗ್ರಹಣೆ, ವಿತರಣೆ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ. ಈ ನಿಯಮಗಳನ್ನು ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಲು ಎಲ್ಲಾ ಇಲಾಖೆಗಳ ಸಹಕಾರ ಅಗತ್ಯವಾಗಿದೆ.
ಈ ನಿಟ್ಟಿನಲ್ಲಿ ಕೆಲವು ಸೂಚನೆಗಳನ್ನು ನೀಡಿದ್ದು ಸ್ಥಳೀಯ ಸಂಸ್ಥೆಗಳ (ಬಿಬಿಎಂಪಿ, ನಗರ ಪಾಲಿಕೆಗಳು, ಪುರಸಭೆಗಳು, ಜಿಲ್ಲೆ/ತಾಲೂಕು/ಗ್ರಾಮ ಪಂಚಾಯತ್) ಮೂಲಕ ರಸ್ತೆ ಮತ್ತು ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸ ವಿಲೇವಾರಿ ಹಾಗೂ ದಂಡ ವಿಧಿಸುವ ಕಾರ್ಯಾಚರಣೆ ತ್ವರಿತವಾಗಿ ಜಾರಿಗೆ ತರಬೇಕು. ಏಕಬಳಕೆಯ ಪ್ಲಾಸ್ಟಿಕ್ ತಯಾರಕರು ಹಾಗೂ ಮಾರಾಟದ ಮೇಲ್ವಿಚಾರಣೆಗೆ ಕಾನೂನು ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧೀನದ ಇಲಾಖೆಗಳಿಗೆ ಸೂಚನೆ ನೀಡಬೇಕು. ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕ ಜಾಗೃತಿ ಮೂಡಿಸುವ ಕಾರ್ಯಕ್ಕೆ ಸಾರ್ವಜನಿಕ ಶಿಕ್ಷಣ ಮತ್ತು ಮಾಧ್ಯಮದ ಜತೆಗೂಡಿ ಅಭಿಯಾನ ಕೈಗೊಳ್ಳಬೇಕು. ತಮ್ಮ ಇಲಾಖೆಯ ವ್ಯಾಪ್ತಿಯ ಎಲ್ಲಾ ಕಛೇರಿಗಳು ಮತ್ತು ಘಟಕಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ತಕ್ಷಣದಿಂದಲೇ ನಿಷೇಧಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.













