(ನ್ಯೂಸ್ ಕಡಬ) newskadaba.com ಜೂ. 26. ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯದ ಅಧ್ಯಯನಕ್ಕೆ ಅರಣ್ಯ ಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಸರಕಾರವು ಸಮಿತಿಯೊಂದನ್ನು ರಚನೆ ಮಾಡಿದ್ದು, 6 ತಿಂಗಳಲ್ಲಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚಿಸಿದ್ದಾರೆ.
ವಿಕಾಸಸೌಧದ ಕಚೇರಿಯಲ್ಲಿ ಬುಧವಾರದಂದು ರಾಜ್ಯ ಜೀವವೈವಿಧ್ಯ ಮಂಡಳಿ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಚಿವರು, ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಭೂಕುಸಿತ ಸಂಭವಿಸಿ ಜೀವಹಾನಿ ಉಂಟಾಗುತ್ತಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದರು.
ಈ ನಿಟ್ಟಿನಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥ ಮೀನಾಕ್ಷಿ ನೇಗಿ ನೇತೃತ್ವದಲ್ಲಿ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಹಾಗೂ ತಜ್ಞರು ಒಳಗೊಂಡ ಸಮಿತಿಯನ್ನು 10 ದಿನಗಳ ಒಳಗಾಗಿ ರಚಿಸಬೇಕು. ಈ ಸಮಿತಿ 6 ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದರು.
ಇದೇ ವೇಳೆ ಕಂಟೋನ್ಮೆಂಟ್ ರೈಲ್ವೆ ಕಾಲನಿಯಲ್ಲಿ 368 ವಿವಿಧ ಪ್ರಭೇದದ ಬೃಹತ್ ಮರಗಳಿದ್ದು, ಇವುಗಳನ್ನು ಸಂರಕ್ಷಿಸಿ ಜೀವವೈವಿಧ್ಯ ಪಾರಂಪರಿಕ ತಾಣವಾಗಿ ಘೋಷಿಸುವಂತೆ ಸ್ಥಳೀಯರು ಮತ್ತು ಪರಿಸರ ಪ್ರೇಮಿಗಳು ಮನವಿ ಸಲ್ಲಿಸಿದ್ದು, ಈ ಬಗ್ಗೆ ಪ್ರಕ್ರಿಯೆ ಆರಂಭಿಸುವಂತೆ ಮತ್ತು ಅಲ್ಲಿಯವರೆಗೆ ಮರ ಕಡಿಯಲು ಅನುಮತಿ ನೀಡದಂತೆ ಸಚಿವರು ಸೂಚಿಸಿದರು.













