(ನ್ಯೂಸ್ ಕಡಬ) newskadaba.com ಜೂ. 28. ರಾಜ್ಯದಲ್ಲಿ ಆರೋಗ್ಯ ಭಾಗ್ಯವನ್ನು ಹೆಚ್ಚಿಸಲು ಸಂಕಲ್ಪ ತೊಟ್ಟಿರುವ ರಾಜ್ಯ ಸರಕಾರ ಮುಂದಿನ 3 ವರ್ಷದೊಳಗೆ ಪ್ರತಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ, ಹೃದ್ರೋಗ ಚಿಕಿತ್ಸಾ ಆಸ್ಪತ್ರೆಯನ್ನು ನಿರ್ಮಾಣ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಘೋಷಿಸಿದ್ದಾರೆ.
ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಕರ್ನಾಟಕವನ್ನು ಆರೋಗ್ಯಕರ ರಾಜ್ಯವನ್ನಾಗಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಗುರಿ ಇಟ್ಟುಕೊಂಡಿದೆ. ಈ ನಿಟ್ಟಿನಲ್ಲಿ ನಮ್ಮ ವೈದ್ಯಕೀಯ ಶಿಕ್ಷಣ ಇಲಾಖೆ ಮೂರು ವರ್ಷಗಳ ಅಭಿವೃದ್ಧಿ ಯೋಜನೆಗಳ ನೀಲನಕ್ಷೆಯನ್ನು ಹಾಕಿಕೊಂಡಿದೆ ಎಂದು ತಿಳಿಸಿದರು. ಈ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲೂ ಎಲ್ಲರಿಗೂ, ಸುಲಭ ಹಾಗೂ ಸುಲಲಿತವಾಗಿ ಚಿಕಿತ್ಸೆ ದೊರೆಯುವಂತೆ ಮಾಡಲಾಗುವುದು. ನಾಗರಿಕರ ಯೋಗ ಕ್ಷೇಮದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲಾಗುವುದು ಎಂದು ಡಾ.ಪಾಟೀಲ್ ಹೇಳಿದರು.













