(ನ್ಯೂಸ್ ಕಡಬ) newskadaba.com ಜು. 05. ಇತ್ತೀಚೆಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಡಿಸಿಎಫ್ ಚಕ್ರಪಾಣಿ ಮತ್ತು ಮೂವರು ಅಧಿಕಾರಿಗಳನ್ನು ಅಮಾನತು ಮಾಡಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಶಿಫಾರಸು ಮಾಡಿದ್ದಾರೆ.
ಉನ್ನತ ಮಟ್ಟದ ವಿಚಾರಣಾ ಸಮಿತಿಯ ಪ್ರಾಥಮಿಕ ವರದಿ ಸ್ವೀಕರಿಸಿ ಪರಾಮರ್ಶಿಸಿದ ಸಚಿವರು, ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಮೇಲ್ನೋಟಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಕರ್ತವ್ಯಲೋಪ ಕಂಡುಬಂದಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಈ ಶಿಫಾರಸು ಮಾಡಿದ್ದಾರೆ.
ಅಲ್ಲದೇ ಹೊರಗುತ್ತಿಗೆ ಸಿಬ್ಬಂದಿಗೆ ವೇತನ ಪಾವತಿ ಮಾಡಲು ಎಪ್ರಿಲ್ ತಿಂಗಳ ಅಂತ್ಯದಲ್ಲಿ ಹಣ ಬಿಡುಗಡೆಯಾಗಿದ್ದರೂ, ಜೂನ್ ತಿಂಗಳವರೆಗೆ ವೇತನ ಪಾವತಿಸದಿರುವುದು ಚಕ್ರಪಾಣಿ ಅವರ ಮೂಲಭೂತ ಕರ್ತವ್ಯ ಲೋಪವಾಗಿದ್ದು, ಇದು ಗಸ್ತು ಕಾರ್ಯಕ್ಕೆ ಹಿನ್ನಡೆ ಉಂಟು ಮಾಡಿದೆ. ಹೊರಗುತ್ತಿಗೆ ಸಿಬ್ಬಂದಿ ಮಾರ್ಚ್ ನಿಂದ 3 ತಿಂಗಳ ವೇತನ ಪಾವತಿ ಆಗಿಲ್ಲ ಎಂದು ಜೂನ್ 23ರಂದು ಪ್ರತಿಭಟನೆ ನಡೆಸಿದ್ದರು. ಸಕಾಲದಲ್ಲಿ ವೇತನ ಸಿಗದೆ ಮುಂಚೂಣಿಯ ಸಿಬ್ಬಂದಿ ಕರ್ತವ್ಯ ವಿಮುಖರಾಗಲು ಕಾರಣವಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಸಂಬಂಧ ಡಿಸಿಎಫ್ ಚಕ್ರಪಾಣಿ ಅಮಾನತಿಗೆ ಶಿಫಾರಸು ಮಾಡಿ, ಇಲಾಖಾ ವಿಚಾರಣೆ ಮಾಡಲು ಶಿಫಾರಸು ಮಾಡಿದ್ದಾರೆ.













