(ನ್ಯೂಸ್ ಕಡಬ) newskadaba.com ಜು.23: ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲಾ 7ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.
ರಾಜ್ಯದ ಪ್ರತಿಯೊಬ್ಬರ ಆರ್ಥಿಕ ಪರಿಸ್ಥಿತಿ, ಜಮೀನು ಇದೆಯೇ ಇಲ್ಲವೇ ಸೇರಿದಂತೆ ಸಮಗ್ರ ಸಮೀಕ್ಷೆ ನಡೆಯಬೇಕು. ಈ ಸಮೀಕ್ಷೆ ವರದಿ ಮುಂದಿನ ಬಜೆಟ್ ಸಿದ್ಧಪಡಿಸುವ ಸಂದರ್ಭದಲ್ಲಿ ಆಧಾರವಾಗಲಿದೆ. ಈ ಬಾರಿಯ ಸಮೀಕ್ಷೆ ದೇಶದಲ್ಲೇ ಮಾದರಿ ಸಮೀಕ್ಷೆಯಾಗಬೇಕು ಎಂದರು.
ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ 15ದಿನಗಳ ಕಾಲ ಸಮೀಕ್ಷೆ ನಡೆಸುವ ನಿರ್ಧಾರ. ಅಕ್ಟೋಬರ್ ಕೊನೆಯ ಒಳಗಾಗಿ ಸಮೀಕ್ಷೆ ವರದಿಯನ್ನು ಸಲ್ಲಿಸಬೇಕು. ತರಬೇತಿ ಸೇರಿದಂತೆ ಸಮೀಕ್ಷೆಗೆ ಪೂರ್ವಭಾವಿ ಸಿದ್ಧತೆಗಳನ್ನು ಈಗಲೇ ಆರಂಭಿಸಲು ಸೂಚನೆ ನೀಡಿದರು. ಸಮೀಕ್ಷೆ ಅತ್ಯಂತ ಸಮರ್ಪಕವಾಗಿ ನಡೆಯಬೇಕು. ಸಮೀಕ್ಷೆ ಕುರಿತು ಯಾವುದೇ ದೂರುಗಳಿಗೆ ಅಸ್ಪದವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಮೀಕ್ಷೆಯಿಂದ ಯಾರೂ ಹೊರಗುಳಿಯದಂತೆ ಖಾತ್ರಿಪಡಿಸಬೇಕು ಎಂದರು.













