(ನ್ಯೂಸ್ ಕಡಬ) newskadaba.com ಜು. 24. 2021ರಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ವಾರೆಂಟ್ ಆರೋಪಿಯೋರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿರುವ ಘಟನೆ ನಡೆದಿದೆ.
ಬಂಧಿತ ಆರೋಪಿಯನ್ನು ಮಂಜೇಶ್ವರದ ಯತಿರಾಜ್ (34) ಎಂದು ಗುರುತಿಸಲಾಗಿದೆ. ಆರೋಪಿಯು 2022ರಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಆರೋಪಿಗೆ 7 ಬಾರಿ ನ್ಯಾಯಾಲಯ ವಾರೆಂಟ್ ಜಾರಿ ಮಾಡಿತ್ತಾದರೂ, ನ್ಯಾಯಾಲಯದ ಆದೇಶ ಉಲ್ಲಂಘಿಸಿ ವಿಚಾರಣೆಗೆ ಹಾಜರಾಗದಿರುವ ಹಿನ್ನೆಲೆ ಆರೋಪಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 269 ಬಿಎನ್ಎಸ್ 2023ರಂತೆ ಪ್ರಕರಣ ದಾಖಲಾಗಿದೆ.
ಆರೋಪಿಯು ಪುತ್ತೂರು ನಗರ, ಬಂಟ್ವಾಳ ನಗರ, ವೇಣೂರು ಪೊಲೀಸ್ ಠಾಣೆಗಳಲ್ಲಿ ವಾಹನ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಆರೋಪಿಯ ವಿರುದ್ಧ ಕೊಣಾಜೆ, ಕಾವೂರು, ವಿಟ್ಲ ಠಾಣೆಗಳಲ್ಲಿ ಒಟ್ಟು ಸುಮಾರು 7 ಪ್ರಕರಣಗಳು ದಾಖಲಾಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.








