(ನ್ಯೂಸ್ ಕಡಬ) newskadaba.com, ಆ.07: ರಾಜ್ಯದಲ್ಲಿ ನೈಋತ್ಯ ಮುಂಗಾರು ಚೇತರಿಕೆಯಾಗಿದ್ದು, ರಾಜ್ಯದಲ್ಲಿ ಉತ್ತಮ ಹಾಗೂ ವ್ಯಾಪಕ ಮಳೆಯಾಗುತ್ತಿದೆ. ಕಳೆದ ವಾರ ದುರ್ಬಲಗೊಂಡಿದ್ದ ಮುಂಗಾರು ಈ ವಾರ ಚುರುಕಾಗಿದೆ. ಕಳೆದ ಮೂರು-ನಾಲ್ಕು ದಿನಗಳಿಂದ ರಾಜ್ಯದಲ್ಲಿ ಒಳ್ಳೆಯ ಮಳೆಯಾಗುತ್ತಿದೆ.
ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ರಾಜ್ಯದಲ್ಲಿ ಒಳ್ಳೆಯ ಮಳೆಯಾಗುವ ಸಾಧ್ಯತೆಗಳಿವೆ. ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ರಾಜ್ಯದ ಹಲವೆಡೆ ಮಳೆಯಾಗಲಿದೆ. ಹಲವೆಡೆ ಹಗುರದಿಂದ ಸಾಧಾರಣ ಮಳೆಯಾದರೆ, ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ. ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ. ಬೆಳ್ತಂಗಡಿ ತಾಲ್ಲೂಕಿನ ಅರಸಿನ ಮಕ್ಕಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 213 ಮಿ.ಮೀ.ನಷ್ಟು ಗರಿಷ್ಠ ಪ್ರಮಾಣದ ಮಳೆಯಾಗಿದೆ.













