(ನ್ಯೂಸ್ ಕಡಬ) newskadaba.com, ಆ.11 ಬೆಂಗಳೂರು: ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಸ್ಮಾರಕ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ವಿಷ್ಣುವರ್ಧನ್ ಅವರ ಸ್ಮಾರಕವನ್ನು ರಾತ್ರೋರಾತ್ರಿ ಧ್ವಂಸ ಮಾಡಿರುವುದು ನಮೆಗೆಲ್ಲ ನೋವು ತಂದಿದೆ. ಡಾ ವಿಷ್ಣುವರ್ಧನ್ ಸ್ಮಾರಕ ವನ್ನು ಶಾಶ್ವತವಾಗಿ ಕಾಪಾಡಿ. ಅದನ್ನು ರಾಷ್ಟ್ರೀಯ ಮಟ್ಟದ ಪ್ರವಾಸಿಗರ ಕೇಂದ್ರವಾಗಿ ಮಾಡಿ ಎಂದು ಆಗ್ರಹಿಸಿದ್ದಾರೆ.
ಕನ್ನಡ ಚಲನಚಿತ್ರ ರಂಗಕ್ಕೆ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಕೊಡುಗೆಯ ಬಗ್ಗೆ ಇಡೀ ಕರುನಾಡಿನ ಮನೆಮನಗಳೂ ಮಾತನಾಡುತ್ತವೆ. ಎಲ್ಲರ ಮನೆಮಾತಾದ ಅಂತಹ ಅದ್ಭುತ ನಟಶ್ರೇಷ್ಠರಿಗೆ ಸೂಕ್ತ ಗೌರವ ನೀಡಲಾಗದ, ಅವರ ಸಮಾಧಿಸ್ಥಳವನ್ನು ಉಳಿಸಿಕೊಳ್ಳಲಾಗದ ಸ್ಥಿತಿಗೆ ನಾವು ತಲುಪಿದ್ದೇವೆ ಎನ್ನುವುದು ನಿಜಕ್ಕೂ ಬೇಸರದ ಸಂಗತಿ.
ಡಾ. ವಿಷ್ಣುವರ್ಧನ್ ಅವರ ಸಮಾಧಿ ಸ್ಥಳದ ಅಭಿಮಾನ್ ಸ್ಟುಡಿಯೋ ಭಾಗವನ್ನು ರಾತ್ರೋರಾತ್ರಿ ಕೆಡವಿ, ಅಸಂಖ್ಯಾತ ಅಭಿಮಾನಿಗಳಿಗೂ ಹಾಗೂ ಅವರ ಅಪೂರ್ವ ಸಾಧನೆಗಳಿಗೂ ಅನ್ಯಾಯ ಮಾಡಿರುವುದು ಅತ್ಯಂತ ನೋವುಂಟುಮಾಡಿದೆ.













