(ನ್ಯೂಸ್ ಕಡಬ) newskadaba.com ಮಂಗಳೂರು, ಎ.17. ಮುಂಬರುವ ವಿಧಾನಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ಮಹಿಳಾ ಸ್ನೇಹಿ(ಪಿಂಕ್) ಮತಗಟ್ಟೆಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಪೈಕಿ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ 3, ದಕ್ಷಿಣ ವಿಧಾನ ಸಭಾ ಕೇತ್ರದಲ್ಲಿ 5, ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ 5, ಮೂಡುಬಿದ್ರೆ ಕ್ಷೇತ್ರದಲ್ಲಿ 3, ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ 1, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ 1, ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ 1 ಹಾಗೂ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ 1 ಮಹಿಳಾ ಸ್ನೇಹಿ ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಜಿಲ್ಲೆಯ ಪ್ರತಿ ವಿಧಾನ ಸಭಾ ಕ್ಷೇತ್ರದಲ್ಲೂ ತಲಾ ಒಂದರಂತೆ ವಿಶೇಷ ಮತಗಟ್ಟೆಗಳನ್ನು ಗುರುತಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಮಹಿಳಾ ಮತದಾರರ ಸಂಖ್ಯೆಗನುಗುಣವಾಗಿ ಮಹಿಳೆಯರೇ ಹೆಚ್ಚಿರುವ ಕಡೆಗಳಲ್ಲಿ ಮಹಿಳಾ ಸ್ನೇಹಿ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಈ ಮತಗಟ್ಟೆಗಳ ನಿರ್ವಹಣೆಯನ್ನು ನಿಯೋಜಿತ ಮಹಿಳಾ ಅಧಿಕಾರಿಗಳು, ಸಿಬ್ಬಂದಿಗಳು ನಿರ್ವಹಿಸಲಿರುವುದು ಮಹಿಳಾ ಸ್ನೇಹಿ ಮತಗಟ್ಟೆಗಳ ವಿಶೇಷತೆಗಳಾಗಿವೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.