(ನ್ಯೂಸ್ ಕಡಬ) newskadaba.com, ಆಗಸ್ಟ್ 29 ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ‘ಆರೆಂಜ್ ಅಲರ್ಟ್’ ಘೋಷಿಸಿದೆ.
ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯ ಹಲವು ಭಾಗಗಳಲ್ಲಿ ಇಂದು ಬೆಳಿಗ್ಗೆ ಭಾರೀ ಮಳೆಯಾಗಿದ್ದು, ಹಲವೆಡೆ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು.
ಕಲಬುರಗಿ ಜಿಲ್ಲೆಯಲ್ಲಿ, ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಹೆಚ್ಚಿನ ಪ್ರಮಾಣದ ಹುಚ್ಚೆಳ್ಳು (Niger Seeds) ಬೆಳೆ ನಾಶವಾಗಿದ್ದು, ರೈತರಿಗೆ ಭಾರೀ ನಷ್ಟವಾಗಿದೆ ಎಂದು ತಿಳಿದುಬಂದಿದೆ.
ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಹಲ್ಕಟ್ಟ ಗ್ರಾಮದಲ್ಲಿ ಸಂಗ್ರಹವಾಗಿದ್ದ 100 ಕ್ವಿಂಟಾಲ್‌ಗೂ ಹೆಚ್ಚು ಹುಚ್ಚೆಳ್ಳಿಗೆ ಮಳೆನೀರು ನುಗ್ಗಿ ಹಾನಿಯಾಗಿದೆ. ಗ್ರಾಮದ ಹೊರವಲಯದಲ್ಲಿ ಇರಿಸಲಾಗಿದ್ದ ಬೆಳೆ ಕೊಚ್ಚಿಹೋಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವಾರು ಭಾಗಗಳಲ್ಲಿ ಇಂದು ಬೆಳಿಗ್ಗೆಯೂ ಭಾರಿ ಮಳೆಯಾಗಿದೆ. ಕೊಡಗು ಜಿಲ್ಲೆಯಲ್ಲಿಯೂ ಇಂದು ಬೆಳಿಗ್ಗೆ ಮತ್ತೆ ಮಳೆ ಆರಂಭವಾಗಿದ್ದು, ಇದರಿಂದಾಗಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಶಾಲೆಗಳು, ಕಾಲೇಜುಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿದೆ.









