(ನ್ಯೂಸ್ ಕಡಬ) newskadaba.com, ಅ.16: ಕಾವೇರಿಯ ಪವಿತ್ರ ತೀರ್ಥೋದ್ಭವ ನಾಳೆ (ಅಕ್ಟೋಬರ್ 17) ಕೊಡಗು ಜಿಲ್ಲೆಯ ಭಾಗಮಂಡಲದ ತಲಕಾವೇರಿಯ ಶ್ರೀ ಭಗಂಡೇಶ್ವರ- ತಲಕಾವೇರಿ ದೇವಾಲಯದ ಪುಷ್ಕರಿಣಿಯಲ್ಲಿ ಜರುಗಲಿದೆ. ಹೊರ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಭಾಗಮಂಡಲದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಸಂಪ್ರದಾಯದಂತೆ, ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯು ಅ.17ರಂದು ನಡೆಯಲಿದೆ. ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಲಿದ್ದಾಳೆ. ಈ ವರ್ಷ ಮಧ್ಯಾಹ್ನದ ಸಮಯದಲ್ಲಿ ತೀರ್ಥೋದ್ಭವ ಜರುಗಲಿರುವುದರಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾವೇರಿ ಮಾತೆಯ ದರ್ಶನ ಪಡೆಯಲು ಆಗಮಿಸುವ ನಿರೀಕ್ಷೆ ಇರುವುದರಿಂದ, ಜಿಲ್ಲಾಡಳಿತದಿಂದ ಪೂರ್ವ ಸಿದ್ಧತೆ ಕೈಗೊಳ್ಳಲಾಗುತ್ತಿದೆ.
ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಿಗೆ ವಿದ್ಯುತ್ ದೀಪಾಲಂಕಾರ, ಸುತ್ತಲೂ ಬ್ಯಾರಿಕೇಡ್ ಅಳವಡಿಕೆ, ವೇದಿಕೆ ನಿರ್ಮಾಣ, ಮಳೆಯಿಂದ ರಕ್ಷಣೆಗಾಗಿ ಮೆಟಲ್ ಶೀಟ್, ಪೆಂಡಾಲ್‌ಗಳು, ಹೂವಿನ ಅಲಂಕಾರ ಮತ್ತಿತರ ಕೆಲಸ ಕಾರ್ಯಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ತೀರ್ಥೋದ್ಭವದ ವೀಕ್ಷಣೆಯ ವೇಳೆ ನೂಕು ನುಗ್ಗಲು ಉಂಟಾಗದಂತೆ ಎಲ್‌ಇಡಿ ಪರದೆಗಳು, ಫೋಟೋಗ್ರಫಿ ಮತ್ತು ಭಕ್ತಾದಿಗಳ ಭದ್ರತೆಯ ದೃಷ್ಟಿಯಿಂದ ಅವಶ್ಯವಿರುವ ಕಡೆಗಳಲ್ಲಿ ಸಿ.ಸಿ. ಕ್ಯಾಮೆರಾಗಳ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗಿದೆ.













