(ನ್ಯೂಸ್ ಕಡಬ) newskadaba.com, ಅ.17: ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಬೆಂಗಳೂರಿನಲ್ಲಿ ಶುಕ್ರವಾರ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 21° C ಹಾಗೂ 29° C ಇರಲಿದೆ.
ಶುಕ್ರವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ನಗರ/ಗ್ರಾಮಾಂತರ) ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆ ಅಥವಾ ಗುಡುಗು ಸಹಿತ ತೀವ್ರ ವರ್ಷಧಾರೆ ಸುರಿಯಲಿದೆ.












