(ನ್ಯೂಸ್ ಕಡಬ) newskadaba.com, ಅ. ಬಂಟ್ವಾಳ-ಕರ್ನಾಟಕದ ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿಯಾಗಿದೆ. ಯೋಜನೆಯನ್ನು ಮೂದಲಿಸಿದವರೇ ಇಂದು ಅದನ್ನು ಕಾಪಿ ಮಾಡುತ್ತಿದ್ದಾರೆ ಎಂದು ಪಂಚ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ. ರೇವಣ್ಣ ಹೇಳಿದರು.
ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ಇದರ ಆಶ್ರಯದಲ್ಲಿ ಬಿ.ಸಿ.ರೋಡಿನ ಡಾ. ಬಿ.ಆರ್.ಅಂಬೇಡ್ಕರ್ ಸಭಾಭವನದಲ್ಲಿ ಮಂಗಳವಾರ ನಡೆದ ಗೃಹಲಕ್ಷ್ಮೀ ಫಲಾನುಭವಿಗಳ ಸ್ವಸಹಾಯ ಸಂಘಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ದ.ಕ. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಗ್ಯಾರಂಟಿ ಯೋಜನೆಗಳ ಸವಲತ್ತು ಪಡೆವರಿದ್ದಾರೆ. ಆದರೆ ಸವಲತ್ತು ಪಡೆದವರೇ ಯೋಜನೆಯನ್ನು ಟೀಕಿಸುತ್ತಿದ್ದಾರೆ. ಬಿಜೆಪಿಗರ ಯೋಜನೆಗಳು ಕೇವಲ ಭಾಷಣಕ್ಕೆ ಸೀಮಿತವಾಗಿದೆ, ಅದು ಕಾರ್ಯರೂಪಕ್ಕೆ ಬರುವುದಿಲ್ಲ, ಸಿಎಂ ಸಿದ್ದರಾಮಯ್ಯ ನವರು ಚುನಾವಣೆ ಸಂದರ್ಭ ನೀಡಿದ್ದ ಎಲ್ಲಾ ಭರವಸೆಗಳು ಈಡೇರಿದೆ” ಎಂದರು.
ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಬಂಟ್ವಾಳ ತಾಲೂಕು ಅಧ್ಯಕ್ಷೆ ಜಯಂತಿ ವಿ.ಪೂಜಾರಿ ಅವರು ಪ್ರಸ್ತಾವನೆಗೈದು, ತಾಲೂಕು ಸಮಿತಿ ಆಶ್ರಯದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ತಾಲೂಕಿಗೆ ಐದು ಯೋಜನೆಗಳಿಗೆ ಇದುವರೆಗೆ ೫೨೮ ಕೋ.ರೂ.ಅನುದಾನ ಬಿಡುಗಡೆಗೊಂಡಿದೆ ಎಂದು ಸಭೆಯ ವಿವರಿಸಿದರು. ಇದೇ ವೇಳೆ ಸ್ವಸಹಾಯ ಗುಂಪುಗಳ ಮೂಲಕ ಸಾಧನೆಗೈದ ಸಂಘಗಳನ್ನು ಗುರುತಿಸಿ ಅಭಿನಂದನೆ ಸಲ್ಲಿಸಲಾಯಿತು. ತಾ.ಪಂ.ಇಒ ಸಚಿನ್ ಕುಮಾರ್ ಸ್ವಾಗತಿಸಿದರು. ಪಿಡಿಒ ಸುನೀಲ್ ಕಾರ್ಯಕ್ರಮ ನಿರೂಪಿಸಿದರು.
’ಕರ್ನಾಟಕದ ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿ’- ಹೆಚ್.ಎಂ. ರೇವಣ್ಣ








