(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.30. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಪ್ರಥಮ ಸ್ಥಾನವನ್ನು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ದ್ವಿತೀಯ ಸ್ಥಾನವನ್ನು ಉಡುಪಿ ಜಿಲ್ಲೆ ತನ್ನದಾಗಿಸಿಕೊಂಡಿದೆ.
ಕೊಡಗು ಜಿಲ್ಲೆ ಮೂರನೇ ಸ್ಥಾನವನ್ನು ಪಡೆದಿದ್ದು, ಚಿಕ್ಕೋಡಿ ಕೊನೆಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಈ ಬಾರಿ ಒಟ್ಟು ಶೇ.59.56 ರಷ್ಟು ಫಲಿತಾಂಶದೊಂದಿಗೆ ಕಳೆದ ಬಾರಿಗಿಂತ ಫಲಿತಾಂಶದಲ್ಲಿ ಹೆಚ್ಚಳ ಕಂಡು ಬಂದಿದೆ. ವಿಜ್ಞಾನ ವಿಭಾಗದಲ್ಲಿ ಬೆಂಗಳೂರಿನ ವಿವಿ ಸರ್ದಾರ್ ಪಟೇಲ್ ಕಾಲೇಜಿನ ವಿಜ್ಞಾನ ವಿದ್ಯಾರ್ಥಿನಿ ಕೃತಿ ಮುಕ್ತಗಿ 597 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, ಹಾಸನದ ಮೋಹನ್ ಮತ್ತು ದಕ್ಷಿಣ ಕನ್ನಡದ ಅಂಕಿತಾ 595 ಅಂಕಗಳು ಪಡೆದು ದ್ವಿತೀಯ ಸ್ಥಾನದಲ್ಲಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ವರ್ಷಿಣಿ ಎಂ. ಭಟ್ 595 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಕಲಾ ವಿಭಾಗದಲ್ಲಿ ಬಳ್ಳಾರಿಯ ಕೊಟ್ಟೂರಿನ ಇಂದೂ ಪಿಯು ಕಾಲೇಜಿನ ವಿದ್ಯಾರ್ಥಿ ಸ್ವಾತಿ 595 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇದೇ ಕಾಲೇಜಿನ ವಿದ್ಯಾರ್ಥಿಗಳಾದ ರಾಜೇಶ್ 593 ಅಂಕ ಗಳಿಸಿ ದ್ವಿತೀಯ ಸ್ಥಾನ ಹಾಗೂ ಕಾವ್ಯಾಂಜಲಿ 588 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.