(ನ್ಯೂಸ್ ಕಡಬ) newskadaba.com, ನ.19 : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇತರೆ ಹಿಂದುಳಿದ ವರ್ಗ(ಒಬಿಸಿ)ಗಳಿಗೆ ಮೀಸಲಾತಿ ಪ್ರಮಾಣವನ್ನು ಶೇ.50ಕ್ಕಿಂತ ಹೆಚ್ಚಿಸಬಾರದೆಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಏಕೆಂದರೆ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗಡೆ, ಜಯಪ್ರಕಾಶ್ ಹೆಗಡೆ ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿಗಳಿಗೆ ನೀಡಲಾಗುತ್ತಿರುವ ಹೆಚ್ಚಳ ಮಾಡಬೇಕೆಂದು ಶಿಫಾರಸ್ಸು ಮಾಡಿದ್ದರು.
ಇದರ ಪ್ರಕಾರ ಜನವರಿ ಇಲ್ಲವೇ ಫೆಬ್ರವರಿ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಿದ್ದ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಹಾಗೂ ಉಳಿದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಒಬಿಸಿ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಲು ತೀರ್ಮಾನಿಸಲಾಗಿತ್ತು.
ಇದಕ್ಕಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭಕ್ತವತ್ಸಲ ಅವರ ನೇತೃತ್ವದಲ್ಲಿ ಸಮಿತಿ ರಚಿಸಿ, ವರದಿ ನೀಡುವಂತೆ ಸರ್ಕಾರ ಸೂಚನೆ ಕೊಟ್ಟಿತ್ತು. ಆದರೆ ಸುಪ್ರೀಂಕೋರ್ಟ್ ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ, ಮೀಸಲಾತಿಗೆ ಸಂಬಂಧಿಸಿದಂತೆ ನೀಡಿರುವ ತೀರ್ಪು ಎಲ್ಲಾ ರಾಜ್ಯಗಳಿಗೂ ಅನ್ವಯವಾಗುತ್ತದೆ ಎಂದು ವ್ಯಾಖ್ಯಾನಿಸಲಾಗಿದೆ.
ನೀವು ಶೇ.50ಕ್ಕಿಂತ ಹೆಚ್ಚು ಮೀಸಲಾತಿಯನ್ನು ಹೆಚ್ಚಳ ಮಾಡಿದರೆ ಯಾವುದೇ ಕಾರಣಕ್ಕೂ ನಾವು ಒಪ್ಪುವುದಿಲ್ಲ. ಅಲ್ಲದೆ ಚುನಾವಣೆಯನ್ನೇ ನಡೆಸಲು ಅವಕಾಶ ಕೊಡುವುದಿಲ್ಲ ಎಂದು ಸುಪ್ರೀಂಕೋರ್ಟ್ ಮಹಾರಾಷ್ಟ್ರಕ್ಕೆ ನೀಡಿರುವ ತೀರ್ಪು ದೇಶದ ಎಲ್ಲಾ ರಾಜ್ಯಗಳಿಗೂ ಎಚ್ಚರಿಕೆ ಗಂಟೆ ಎಂದು ಹೇಳಲಾಗುತ್ತಿದೆ.












