(ನ್ಯೂಸ್ ಕಡಬ) newskadaba.com, ನ.22: ರಾಜ್ಯಾದ್ಯಂತ ಚಳಿಗಾಲ ಆರಂಭವಾಗಿದ್ದು, ಕೆಲ ದಿನಗಳಿಂದ ದುರ್ಬಲವಾಗಿದ್ದ ಈಶಾನ್ಯ ಮಾನ್ಸೂನ್ ಮತ್ತೆ ಚುರುಕುಗೊಂಡಿದೆ. ಶನಿವಾರ (ನವೆಂಬರ್ 22) ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎಂದಿನಂತೆ ಒಣ ಹವೆ ಮುಂದುವರಿಯಲಿದೆ (Karnataka Weather). ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಬೀಳಲಿದೆ. ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 19°C ಹಾಗೂ 28°C ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವೆಡೆ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯಾದ್ಯಂತ ಒಣ ಹವೆ ಇರುವ ಸಾಧ್ಯತೆ ಇದೆ.












