(ನ್ಯೂಸ್ ಕಡಬ) newskadaba.com, ನ.25 ಹೊಸದಿಲ್ಲಿ: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಜಂತರ್ – ಮಂತರ್‌ನಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ ಪ್ರಾಥಮಿಕ ಶಾಲಾ ಶಿಕ್ಷಕರು, ಈ ಸಂಬಂಧ ಸೂಕ್ತ ಕಾನೂನು ತಿದ್ದುಪಡಿ ತರುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿದರು.
ಕೇಂದ್ರ ಸರಕಾರದ ಗಮನ ಸೆಳೆಯಲು ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್ ಹಮ್ಮಿಕೊಂಡಿದ್ದ ಈ ಪ್ರತಿಭಟನೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿ ಆದೇಶಿಸಿರುವ ಸುಪ್ರೀಂ ಕೋರ್ಟ್ ಕ್ರಮದಿಂದ ಕರ್ನಾಟಕದ 2 ಲಕ್ಷ ಸೇರಿದಂತೆ ದೇಶದ 30 ಲಕ್ಷ ಪ್ರಾಥಮಿಕ ಶಾಲಾ ಶಿಕ್ಷಕರು ಅಭದ್ರತೆ ಎದುರಿಸುವಂತಾಗಿದೆ. ಕೂಡಲೇ ಕೇಂದ್ರ ಸರಕಾರ ಮಧ್ಯ ಪ್ರವೇಶಿಸಿ, ಸಂಸತ್ ಅವೇಶನದಲ್ಲಿ ವಿಶೇಷ ಕಾಯಿದೆ ಜಾರಿಗೆ ತರಬೇಕು. ಈ ಮೂಲಕ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ಸೇವಾ ರಕ್ಷಣೆ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾನವ ಸಂಪನ್ಮೂಲ ಅಭಿವೃದ್ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಪ್ರತಿಭಟನಾಕಾರರು ಒತ್ತಾಯಿಸಿದರು.
ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್‌ನ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ ಮಾತನಾಡಿ, ”ಈಗಾಗಲೇ ಕರ್ನಾಟಕ ಸರಕಾರ ಸುಪ್ರೀಂ ಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿ, ಪೂರಕ ಮಾಹಿತಿ ಸಂಗ್ರಹಿಸಿದೆ. ಶಿಕ್ಷಕರ ಫೆಡರೇಷನ್ ಕೂಡ ಮೇಲ್ಮನವಿ ಸಲ್ಲಿಸಿದೆ. ಕೇಂದ್ರ ಸರಕಾರ ವಿಶೇಷ ಕಾಯಿದೆ ಜಾರಿಗೊಳಿಸುವ ಮೂಲಕ ಶಿಕ್ಷಕರ ಹಿತ ಕಾಪಾಡಬೇಕು,” ಎಂದು ಮನವಿ ಮಾಡಿದರು.










