ಕಬಕದಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ: 10 ಗ್ರಾಂ MDMA ವಶ, ಓರ್ವನ ಬಂಧನ



(ನ್ಯೂಸ್ ಕಡಬ) newskadaba.com, ಡಿ.04 : ಕಬಕ ಗ್ರಾಮದ ಮುರ ಪ್ರದೇಶದಲ್ಲಿರುವ ರೈಲ್ವೇ ಸೇತುವೆ ಬಳಿ ವ್ಯಕ್ತಿಯೊಬ್ಬ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆ ಪೊಲೀಸರು ದಿಢೀರ್ ದಾಳಿ ನಡೆಸಿ, ಆರೋಪಿಯಿಂದ 10 ಗ್ರಾಂ MDMA (ಮೆಥಿಲೆನೆಡಿಯಾಕ್ಸಿಮೆಥಾಂಫೆಟಮಿನ್) ನಿಷೇಧಿತ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ಪುತ್ತೂರು ಕಬಕ ನಿವಾಸಿ 41 ವರ್ಷದ ಉಮ್ಮರ್ ಫಾರೂಕ್ ಎಂದು ಗುರುತಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ NDPS ಕಾಯ್ದೆಯ ಕಲಂ 8(C) ಮತ್ತು 22(b) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.





ಮಾಹಿತಿಯ ಪ್ರಕಾರ, ರೈಲ್ವೇ ಸೇತುವೆ ಬಳಿ ವ್ಯಕ್ತಿಯೊಬ್ಬ ಮಾದಕವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದಾನೆ ಎಂಬ ನಿಖರ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ, ಪುತ್ತೂರು ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕ ಆಂಜನೇಯ ರೆಡ್ಡಿ ಮತ್ತು ಸಿಬ್ಬಂದಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ದಾಳಿ ನಡೆಸಿದರು. ಘಟನಾ ಸ್ಥಳದಲ್ಲೇ ಶಂಕಿತ ಉಮ್ಮರ್ ಫಾರೂಕ್‌ನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಯಿತು. ಅಲ್ಲದೆ, ಆತನ ದ್ವಿಚಕ್ರ ವಾಹನವನ್ನು ಪರಿಶೀಲಿಸಿದಾಗ, ಮಾರಾಟದ ಉದ್ದೇಶದಿಂದ ಆತ ಅಕ್ರಮವಾಗಿ ಇಟ್ಟುಕೊಂಡಿದ್ದ ಸುಮಾರು ₹50,000 ಮೌಲ್ಯದ 10 ಗ್ರಾಂ MDMA ಮಾದಕವಸ್ತು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.






ಪ್ರಾಥಮಿಕ ವಿಚಾರಣೆಯಲ್ಲಿ ಬಂಧಿತ ಆರೋಪಿ ಉಮ್ಮರ್ ಫಾರೂಕ್ ವಿರುದ್ಧ ಈಗಾಗಲೇ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 6 ಬೇರೆ ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ. ಈ ಹಿಂದೆ ಆತ ಯಾವೆಲ್ಲಾ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಎಂಬುದರ ಕುರಿತು ಮತ್ತು ಈ ಮಾದಕ ವಸ್ತು ಜಾಲದ ಹಿಂದೆ ಯಾರು ಇದ್ದಾರೆ ಎಂಬುದರ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

 

error: Content is protected !!
Scroll to Top