(ನ್ಯೂಸ್ ಕಡಬ) newskadaba.com,ಡಿ.24: ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ರಾಜ್ಯ ಸಾರಿಗೆ ನಿಗಮಗಳ ಮಹಿಳಾ ನೌಕರರಿಗೆ ಋತುಚಕ್ರದ ರಜೆ ನೀಡಲು ಸಾರಿಗೆ ಇಲಾಖೆ ಸೂಚನೆ ನೀಡಿದೆ.
ಜನವರಿ 1ರಿಂದ ಮಹಿಳಾ ಡ್ರೈವರ್, ಕಂಡಕ್ಟರ್ ಸೇರಿ ಮಹಿಳಾ ಸಿಬ್ಬಂದಿ ಋತುಚಕ್ರದ ರಜೆ ಪಡೆಯಬಹುದಾಗಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್ಡಬ್ಲೂಕೆಆರ್ಟಿಸಿ ಮತ್ತು ಕೆಕೆಆರ್ಟಿಸಿ ಎಂಡಿ ಅಕ್ರಂ ಪಾಷ ಈ ಬಗ್ಗೆ ಮಂಗಳವಾರ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಸರ್ಕಾರವು ಮಹಿಳಾ ನೌಕರರ ಮನೋಸ್ಥೆರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆಯ ಸೌಲಭ್ಯವನ್ನು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೂ ಕಲ್ಪಿಸಿ ಷರತ್ತು ಮತ್ತು ನಿಬಂಧನೆಗೊಳಪಟ್ಟು ರಜೆ ಮಂಜೂರು ಮಾಡಲು ಆದೇಶಿಸಿದೆ.
ನಿಗಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ 01 ಜನವರಿ 2026ರಿಂದ ಜಾರಿಗೆ ಬರುತ್ತಿದ್ದು, ಪ್ರತಿ ತಿಂಗಳು ಒಂದು ದಿನದಂತೆ ಋತುಚಕ್ರ ರಜೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.












