ಚಿತ್ರದುರ್ಗ ಬಸ್ ದುರಂತ: ಮೃತರ ಕುಟುಂಬಕ್ಕೆ ರೂ. 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ



(ನ್ಯೂಸ್‌ ಕಡಬ)com,ಡಿ.25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ ರೂ. 2 ಲಕ್ಷ ಪರಿಹಾರ ಘೋಷಿಸಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದು, ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೆರವು ನೀಡುವುದಾಗಿ ತಿಳಿಸಿದ್ದಾರೆ.





ಪ್ರಧಾನಿ ಕಾರ್ಯಾಲಯವು ಎಕ್ಸ್ ಮೂಲಕ ಮಾಹಿತಿ ಹಂಚಿಕೊಂಡಿದ್ದು, “ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿರುವುದು ಅತ್ಯಂತ ದುಃಖಕರ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ” ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.






ಮೃತರ ಸಂಬಂಧಿಕರಿಗೆ ಪಿಎಂಎನ್‌ಆರ್‌ಎಫ್‌ನಿಂದ ರೂ.2 ಲಕ್ಷ ಮತ್ತು ಗಾಯಾಳುಗಳಿಗೆ ರೂ.50,000 ಪರಿಹಾರ ನೀಡಲಾಗುವುದು ಎಂದು ಘೋಷಿಸಲಾಗಿದೆ. ಗೊರ್ಲತ್ತು ಕ್ರಾಸ್ ಬಳಿ ಮಂಗಳವಾರ ಮುಂಜಾನೆ ಸುಮಾರು 3 ಗಂಟೆ ಸುಮಾರಿಗೆ ಬೆಂಗಳೂರುದಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಎದುರಿನಿಂದ ಬಂದ ಕಂಟೇನರ್ ಲಾರಿ ಡಿವೈಡರ್ ದಾಟಿ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್‌ಗೆ ಬೆಂಕಿ ಹೊತ್ತಿಕೊಂಡು ಅಪಘಾತ ಸಂಭವಿಸಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

error: Content is protected !!
Scroll to Top