(ನ್ಯೂಸ್ ಕಡಬ) newskadaba.com,ಜ.17 ಬೆಂಗಳೂರು: ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಐದು ವರ್ಷಗಳಲ್ಲಿ 4000 ಕೋಟಿ ವೆಚ್ಚ ಮಾಡುವ ಗುರಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು…..
ಅವರು ಇಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣ ಮತ್ತು ನಿರ್ವಹಣೆ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಅಜೀಂ ಪ್ರೇಮ್ ಜಿ ಪ್ರತಿಷ್ಠಾನ ನಡುವೆ ಒಡಂಬಡಿಕೆಗೆ ಸಹಿ ಹಾಕಿದ ನಂತರ ಮಾತನಾಡಿದರು.
ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ವತಿಯಿಂದ ಸಾವಿರ ಆಸ್ಪತ್ರೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣಕ್ಕೆ ಸಾವಿರಾರು ಕೋಟಿ ರೂ ಗಳ ಆರೋಗ್ಯ ಸಂಬಂಧಿಸಿದಂತೆ ಒಡಂಬಡಿಕೆಗೆ ಸಹಿ ಮಾಡಲಾಗಿದೆ. ಇದಕ್ಕಾಗಿ ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆ ಆವರಣದಲ್ಲಿ ಸರ್ಕಾರ 10 ಎಕರೆ ಸ್ಥಳವನ್ನು 99 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೀಡಲು ಒಪ್ಪಂದವಾಗಿದೆ ಎಂದರು.
ಶಿಕ್ಷಣಕ್ಕೆ ನೆರವು
ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಕಳೆದ 25 ವರ್ಷಗಳಿಂದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇವೆ ಸಲ್ಲಿಸುತ್ತಿದೆ. 2021ರಲ್ಲಿ ಶಿಕ್ಷಕರ ತರಬೇತಿಗೆ, 2024 ರಲ್ಲಿ ಎಲ್.ಕೆ.ಜಿ ಯಿಂದ ಹತ್ತನೇ ತರಗತಿಯವರೆಗೆ ವಾರದಲ್ಲಿ ನಾಲ್ಕು ದಿನ ಮೊಟ್ಟೆ ಕೊಡುವ ಕಾರ್ಯಕ್ರಮಕ್ಕೆ ಒಂದೂವರೆ ಕೋಟಿ ರೂ ನೀಡುವ ಮೂಲಕ ಕೈಜೋಡಿಸಿದ್ದಾರೆ. ಸರ್ಕಾರಿ ಕಾಲೇಜುಗಳಲ್ಲಿ ಓದಿರುವವವರಿಗೆ ವರ್ಷಕ್ಕೆ 30 ಸಾವಿರ ವಿದ್ಯಾರ್ಥಿ ವೇತನವನ್ನು ದೀಪಿಕಾ ವಿದ್ಯಾರ್ಥಿ ವೇತನದಡಿ ನೀಡುತ್ತಿದ್ದಾರೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಅಜೀಂ ಪ್ರೇಮ್ ಜಿ ಅವರಿಗೆ ಧನ್ಯವಾದಗಳನ್ನು ತಿಳಿಸಿದರು.












