ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಬದಲು ನಗದು ಬಹುಮಾನ



(ನ್ಯೂಸ್ಕಡಬ) newskadaba.com,.24 ಬೆಂಗಳೂರು: ಸರಕಾರಿ ಶಾಲೆಗಳಲ್ಲಿ ಓದಿ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಿಸುವ ಬದಲಾಗಿ ವಿದ್ಯಾರ್ಥಿಗಳ ಖಾತೆಗೆ ಹಣ ಸಂದಾಯ ಮಾಡುವಂತೆ ಶಾಲಾ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿ ಸೂಚನೆ ನೀಡಿದೆ.





ಈ ಪ್ರಕಾರ ಪ್ರತಿ ಜಿಲ್ಲೆಯಲ್ಲಿ ಅಗ್ರ ಸ್ಥಾನ ಪಡೆದ ಟಾಪ್‌-3 ವಿದ್ಯಾರ್ಥಿಗಳ ಆಧಾರ್‌ ಲಿಂಕ್‌್ಡ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ನಗದು ಬಹುಮಾನವು ಪ್ರತಿ ವಿದ್ಯಾರ್ಥಿಗೆ 50,000 ರೂ. ಆಗಿರಲಿದೆ. 2024-25ನೇ ಶೈಕ್ಷಣಿಕ ವರ್ಷದಲ್ಲಿ 758 ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್‌ ಮೂಲಕ ನಗದು ಬಹುಮಾನಕ್ಕೆ ಅರ್ಹರಾಗಿದ್ದಾರೆ.






ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್‌ ಮೂಲಕ ವಿದ್ಯಾರ್ಥಿಗಳ ಆಧಾರ್‌ಸಂಖ್ಯೆ ಜೋಡಣೆಯಾಗಿರುವ ಬ್ಯಾಂಕ್‌ ಖಾತೆಗೆ ಹಣವನ್ನು ಡಿಬಿಟಿ ಮೂಲಕ ವಿತರಿಸುವಂತೆ ಸೂಚಿಸಲಾಗಿದ್ದು, ಕೊರತೆಯಾಗುವ ಅನುದಾನವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಸ್ವಂತ ಮೂಲಗಳಿಂದ ಭರಿಸುವಂತೆಯೂ ನಿರ್ದೇಶಿಸಲಾಗಿದೆ.
ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡುವ ಬದಲು ಹಣ ಸಂದಾಯ ಮಾಡುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. 2025ರ ನ.14ರ ಮಕ್ಕಳ ದಿನಾಚರಣೆಯಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು.

error: Content is protected !!
Scroll to Top