ಅಕ್ರಮ ವಲಸಿಗರ ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ



(ನ್ಯೂಸ್ಕಡಬ) newskadaba.com,.30  ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಲಸಿಗರನ್ನು ಪತ್ತೆ ಮಾಡಿ, ಗಡಿಪಾರು ಮಾಡಲು ವಿಶೇಷ ತಂಡ ರಚನೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ಗುರುವಾರ ಹೇಳಿದೆ.





ಗುರುವಾರ ವಿಧಾನಸಭೆಯಲ್ಲಿ ಬಿಜೆಪಿ ಉಚ್ಛಾಟಿತ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್, ರಾಜ್ಯದಲ್ಲಿ ನೆಲೆಸಿರುವ ಅಕ್ರಮ ಬಾಂಗ್ಲಾ ವಲಸಿಗರ ಮಾಹಿತಿಯನ್ನು ನೀಡಿದ್ದ ಹಿಂದುತ್ವ ಕಾರ್ಯಕರ್ತರಿಗೆ ಪೊಲೀಸರಿಂದ ಕಿರುಕುಳ ಉಂಟಾಗುತ್ತಿರುವ ಕುರಿತು ಗಮನ ಸೆಳೆದ ಸೂಚನೆಗೆ ಗೃಹ ಸಚಿವರ ಪರವಾಗಿ ಸಾರಿಗೆ ಹಾಗೂ ಮುಜುರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಉತ್ತರಿಸಿದರು.






ಅಕ್ರಮ ವಲಸಿಗರ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಿದ ಹಿಂದೂ ಪರ ಕಾರ್ಯಕರ್ತರಿಗೆ ಪೊಲೀಸ್ ಇಲಾಖೆ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.ರಾಜ್ಯದಲ್ಲಿ 370 ಅಕ್ರಮ ವಲಸಿಗರಿದ್ದು, ಅವರಲ್ಲಿ 213 ಜನರನ್ನು ಗಡೀಪಾರು ಮಾಡಲಾಗಿದೆ. ಇನ್ನುಳಿದ 157 ಮಂದಿಯ ವಿರುದ್ಧ ಅಕ್ರಮ ವಲಸಿಗರ ಬಂಧನ ಕೇಂದ್ರ(ಎಫ್.ಡಿ.ಸಿ)ದಲ್ಲಿನ ಪ್ರಕರಣಗಳಿರುವುದರಿಂದ, ಅವರನ್ನು ಗಡಿಪಾರು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ 25 ಲಕ್ಷಕ್ಕಿಂತ ಹೆಚ್ಚು ಬಾಂಗ್ಲಾದೇಶಿಯರು ಅಕ್ರಮವಾಗಿ ನೆಲೆಸಿದ್ದು, ಹಾಸನ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ಕಾಫಿ ತೋಟ, ಶಾಪಿಂಗ್ ಮಾಲ್‍ಗಳು, ಐಟಿ ಬಿಟಿ ಕಂಪೆನಿಗಳಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ. ನಕಲಿ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮಾಡಿಸಿಕೊಂಡಿದ್ದಾರೆ. ಇದೊಂದು ದೊಡ್ಡ ಜಾಲ. ಇದಕ್ಕೆ ಕಡಿವಾಣ ಹಾಕದಿದ್ದರೆ, ಭಯಾನಕ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

error: Content is protected !!
Scroll to Top