(ನ್ಯೂಸ್ ಕಡಬ) newskadaba.com,ಮಾ.02: ಗಡಿಭಾಗವಾದ ಮಡಿಕೇರಿ ತಾಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಫೆ.28ರಂದು ಗಡಿಭಾಗವಾದ ಮಡಿಕೇರಿ ತಾಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ವರದಿಯಾಗಿದೆ.ಮಡಿಕೇರಿಯ ಸಂತ ಜೋಸೆಫ್ ನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು . ಫೆ.28ರಂದು ಸಂಜೆ 5:30ರ ವೇಳೆಗೆ ಪೂಜಾ ಬಸ್ ಮೂಲಕ ಬಂದು ಬೆಟ್ಟತ್ತೂರಿನ ತನ್ನ ಮನೆ ಸಮೀಪ ಬಸ್ಸಿನಿಂದ ಇಳಿದು ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿದೆ.
ದಾಳಿಯಿಂದ ಬಾಲಕಿ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಮೃತದೇಹವನ್ನು ಮಡಿಕೇರಿಯ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು ಮರಣೋತ್ತರ ಪರೀಕ್ಷೆ ನಡೆಯಲಿದೆ.ಈ ದುರ್ಘಟನೆಯ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡಾನೆ ದಾಳಿಯಿಂದ ಅನೇಕ ಜೀವಗಳು ಹೋಗಿದ್ದರು. ಅರಣ್ಯ ಇಲಾಖೆ ಮತ್ತು ಸರಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ದೂರಿದ್ದಾರೆ.
ಅಲ್ಲದೆ ಪ್ರತಿಭಟನೆಯ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ.ಬೆಟ್ಟತ್ತೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಡಾನೆಗಳ ಓಡಾಟ ಹೆಚ್ಚಾಗಿರುವುದರಿಂದ ಹಲವು ಬಾರಿ ದೂರು ನೀಡಿದ್ದರೂ ಸಮರ್ಪಕ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಿದ್ದಾರೆ. ಅಮಾಯಕಿ ಬಾಲಕಿಯ ಜೀವ ಹೋಗಿರುವುದು ಅತ್ಯಂತ ದುಃಖಕರ ಎಂದು ಗ್ರಾಮಸ್ಥರು ಕಣ್ಣೀರು ಹಾಕುತ್ತಿದ್ದಾರೆ.








