(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.12. ಇಂದು ನಡೆಯಲಿರುವ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನ ಸುಸೂತ್ರವಾಗಿ ನಡೆಯಲು ಬೇಕಾದ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರವಿಕಾಂತೇ ಗೌಡ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನ ಶಾಂತಿ ಮತ್ತು ಸುಸೂತ್ರವಾಗಿ ನಡೆಯಲು ಬೇಕಾದ ಎಲ್ಲಾ ಅಗತ್ಯ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದ್ದು, ಜಿಲ್ಲೆಯ ಅತ್ಯಂತ ಸೂಕ್ಷ್ಮ ಮತಗಟ್ಟೆಗಳ ಮೇಲೆ ಪೊಲೀಸ್ ಇಲಾಖೆ ಕಣ್ಣಿರಿಸಿದೆ. ಜಿಲ್ಲೆಯ ವಿವಿಧೆಡೆ 24 ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು, ಅಲ್ಲಿ ಸಿಸಿಟಿವಿಗಳ ಕಣ್ಗಾವಲಿನೊಂದಿಗೆ ಕೇಂದ್ರೀಯ ಭದ್ರತಾ ಪಡೆಗಳ ಯೋಧರನ್ನು ನಿಯೋಜಿಸಲಾಗಿದೆ. ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ನಿರ್ಭೀತಿಯಿಂದ ಮತ ಚಲಾಯಿಸುವಂತೆ ಎಸ್ಪಿಯವರು ಕರೆ ನೀಡಿದ್ದಾರೆ.