(ನ್ಯೂಸ್ ಕಡಬ) newskadaba.com ಕಡಬ, ಮಾ. 17. ದೀರ್ಘಕಾಲದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಪೆರಾಬೆ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಪೆರಾಬೆ ಗ್ರಾಮದ ನಡ್ಡೋಟ್ಟು ಮನೆ ನಿವಾಸಿ ಸಂಜೀವ ಪೂಜಾರಿ ಎಂದು ಗುರುತಿಸಲಾಗಿದೆ. ಇವರು ಕಳೆದ 17 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು, ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.
ಮಾರ್ಚ್ 13ರಂದು ಸಂಜೀವ ಪೂಜಾರಿಯವರ ಪತ್ನಿ ಪುಷ್ಪವತಿ ಅವರು ಪಡಿತರ ತರಲು ಸುರಳಿಗೆ ಹೋಗಿದ್ದರು. ಮಧ್ಯಾಹ್ನ ಮನೆಗೆ ವಾಪಸ್ ಬಂದಾಗ, ಸಂಜೀವ ಪೂಜಾರಿಯವರು ವಾಂತಿ ಮಾಡುತ್ತಿರುವುದು ಕಂಡುಬಂದಿದೆ. ತಕ್ಷಣ ವಿಚಾರಿಸಿದಾಗ ಅವರು ವಿಷ ಪದಾರ್ಥ ಸೇವಿಸಿರುವುದಾಗಿ ತಿಳಿಸಿದ್ದಾರೆ. ತಕ್ಷಣವೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 14ರಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಮೃತರ ಹಿರಿಯ ಮಗ ಗಣೇಶ್ ಪ್ರಸಾದ್ ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ UDR ನಂಬ್ರ 09/2026, ಕಲಂ: 194 BNSS-2023 ರಂತೆ ಪ್ರಕರಣ ದಾಖಲಾಗಿದೆ.








