(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು.09. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸ್ ಇಲಾಖೆ, ಆರೋಪಿಗಳ ಬಗ್ಗೆ ಸಾಕಷ್ಟು ಮಹತ್ವದ ಸುಳಿವು ದೊರೆತಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಪಶ್ಚಿಮ ವಲಯ ಐಜಿಪಿ ಪಿ.ಹರಿಶೇಖರನ್ ತಿಳಿಸಿದ್ದಾರೆ.
ಬಂಟ್ವಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶರತ್ ಕೊಲೆ ವಿಚಾರದಲ್ಲಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಆರೋಪಿಗಳು ಯಾರೇ ಆಗಿರಲಿ. ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು. ಇದೀಗ ಬಂಟ್ವಾಳ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಸ್ಥಿತಿ ಶಾಂತವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಾಗ್ರತೆ ವಹಿಸಲಾಗಿದೆ ಎಂದರು. ಜಿಲ್ಲೆಯಲ್ಲಿ 26 ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದ್ದು ಪ್ರತೀ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಸಮಾಜ ದ್ರೋಹಿ ಚಟುವಟಿಕೆ ನಡೆಸಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಗುಂಪು ಸೇರಿ ಗಲಾಟೆ ಮಾಡಿದರೆ ಮುಲಾಜಿಯಿಲ್ಲದೆ ಲಾಠಿ ಪ್ರಯೋಗ ಮಾಡಲು ಹಾಗೂ ಪರಿಸ್ಥಿತಿ ಕೈ ಮೀರಿದರೆ ಆಶ್ರುವಾಯು ಪ್ರಯೋಗಿಸಲೂ ಸೂಚನೆ ನೀಡಲಾಗಿದೆ. ಶನಿವಾರ ನಡೆದ ಶರತ್ ಶವಯಾತ್ರೆಯ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಯ ಸಂಪೂರ್ಣ ವೀಡಿಯೊ ಚಿತ್ರೀಕರಣ ಇಲಾಖೆ ಬಳಿ ಇದ್ದು, ಶೀಘ್ರದಲ್ಲೇ ನೈಜ ಆರೋಪಿಗಳನ್ನೆಲ್ಲಾ ಬಂಧಿಸಲಾಗುವುದು ಎಂದರು.