ಶಿಕ್ಷಣ ಕ್ಷೇತ್ರಕ್ಕೆ ಹೊಸ ದಿಕ್ಕು: ಸರ್ಕಾರಿ ಶಾಲೆಗಳ ಬಲವರ್ಧನೆಗೆ 8 ಗ್ಯಾರಂಟಿಗಳ ಘೋಷಣೆ..!



(ನ್ಯೂಸ್‌ ಕಡಬ) newskadaba.com,  ಎ.28   ರಾಜ್ಯದ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂಟು ‘ಗ್ಯಾರಂಟಿ’ಗಳನ್ನು ಘೋಷಿಸಿದ್ದಾರೆ.ರಾಜ್ಯದಲ್ಲಿನ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಈ ಸಮಗ್ರ ಯೋಜನೆಯನ್ನು ರೂಪಿಸಲಾಗಿದೆ.







ಈ ಯೋಜನೆಯಡಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ತ್ವರಿತ ನೇಮಕಾತಿ ಮೂಲಕ ನಿವಾರಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಪ್ರತಿಯೊಂದು ಶಾಲೆಯಲ್ಲೂ ಸುಸಜ್ಜಿತ ಕಟ್ಟಡ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾದ ತರಗತಿ ಕೊಠಡಿಗಳು, ಶುದ್ಧ ಕುಡಿಯುವ ನೀರು ಹಾಗೂ ಶೌಚಾಲಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.






ವಿದ್ಯಾರ್ಥಿಗಳು ಮತ್ತು ಪೋಷಕರ ಇಚ್ಛೆಗೆ ತಕ್ಕಂತೆ ಭಾಷಾ ಮಾಧ್ಯಮವನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ನೀಡಲಾಗುತ್ತದೆ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸುತ್ತಮುತ್ತಲಿನ ಗ್ರಾಮಗಳು ಮತ್ತು ವಾರ್ಡ್‌ಗಳಿಂದ ಬರಲು ಉಚಿತ ಸಾರಿಗೆ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತದೆ.

ಆಧುನಿಕ ಶಿಕ್ಷಣದ ಅಗತ್ಯಗಳಿಗೆ ಅನುಗುಣವಾಗಿ ಪ್ರತಿ ಶಾಲೆಯಲ್ಲೂ ಡಿಜಿಟಲ್ ಕಲಿಕೆಯನ್ನು ಉತ್ತೇಜಿಸಿ, ಸ್ಮಾರ್ಟ್ ಕ್ಲಾಸ್‌ಗಳನ್ನು ಸ್ಥಾಪಿಸುವುದಕ್ಕೆ ಆದ್ಯತೆ ನೀಡಲಾಗಿದೆ. ಕಲೆ ಮತ್ತು ಕ್ರೀಡಾ ಚಟುವಟಿಕೆಗಳಿಗೂ ಸಮಾನ ಮಹತ್ವ ನೀಡಲಾಗುತ್ತದೆ. ಶಾಲೆಗಳ ಶೈಕ್ಷಣಿಕ ಗುಣಮಟ್ಟವನ್ನು ನಿರಂತರವಾಗಿ ಪರಿಶೀಲಿಸಲು ಪ್ರತ್ಯೇಕ ಮೇಲ್ವಿಚಾರಣಾ ಸಮಿತಿಗಳನ್ನು ರಚಿಸಲಾಗುತ್ತದೆ. ಜೊತೆಗೆ, ಭವಿಷ್ಯದ ಉದ್ಯೋಗಾವಕಾಶಗಳನ್ನು ಗಮನದಲ್ಲಿಟ್ಟುಕೊಂಡು, ಶಾಲಾ ಹಂತದಿಂದಲೇ ವಿದ್ಯಾರ್ಥಿಗಳಿಗೆ ಕೌಶಲಾಧಾರಿತ ತರಬೇತಿಯನ್ನು ಒದಗಿಸುವ ಭರವಸೆಯನ್ನು ನೀಡಿದ್ದಾರೆ.

error: Content is protected !!
Scroll to Top