(ನ್ಯೂಸ್ ಕಡಬ) newskadaba.com, ಎ.29 ಸುಬ್ರಹ್ಮಣ್ಯದಲ್ಲಿ ಅಂಬ್ಯುಲೆನ್ಸ್ ಚಾಲಕ ಹೃದಯಾಘಾತಕ್ಕೆ ಬಲಿ
ಸುಬ್ರಹ್ಮಣ್ಯ: ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಯೊಬ್ಬರು ದಿಢೀರ್ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ.
ಸುಮಾರು ಒಂದು ವರ್ಷದ ಹಿಂದೆ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಗೊಂಡು ಬಂದಿದ್ದ ಅವರು, ಕರ್ತವ್ಯದ ಅವಧಿಯಲ್ಲಿ ಜನಾನುರಾಗಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇಂದು ಏಕಾಏಕಿ ಹೃದಯಾಘಾತಕ್ಕೆ ಒಳಗಾದ ಅವರನ್ನು ತಕ್ಷಣ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತದೇಹವನ್ನು ಪ್ರಸ್ತುತ ಸುಳ್ಯ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತರು ಪತ್ನಿ, ಮಕ್ಕಳು ಸೇರಿದಂತೆ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.ಇವರ ಅಕಾಲಿಕ ನಿಧನಕ್ಕೆ ಸುಬ್ರಹ್ಮಣ್ಯ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಸಾರ್ವಜನಿಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.









