(ನ್ಯೂಸ್ ಕಡಬ) newskadaba.com, ಮೇ.02: ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ಹಿಟ್ & ರನ್‌ಗೆ (Hit & Run) ಬೈಕ್ ಸವಾರ ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಬೆಂಗಳೂರು (ಹೊರವಲಯ ನೆಲಮಂಗಲ ಬಳಿಯ ಹುಸ್ಕೂರು ಎಪಿಎಂಸಿ ಬಳಿ ನಡೆದಿದೆ.
ಟಾಟಾ ಏಸ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಿರೀಶ್ (30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರು ಉತ್ತರ ತಾಲೂಕು ವಡೇರಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಗಿರೀಶ್ ಡ್ರೈವರ್ ಕೆಲಸ ಮಾಡಿಕೊಂಡಿದ್ದರು. ಜಯಮ್ಮ ಹಾಗೂ ಪಾಪಣ್ಣ ದಂಪತಿಯ ಮಗ ಗಿರೀಶ್, ತಂದೆಯ ಮರಣದ ಬಳಿಕ ಡ್ರೈವಿಂಗ್ ಕೆಲಸ ಮಾಡಿಕೊಂಡು ಕುಟುಂಬಕ್ಕೆ ಆಧಾರವಾಗಿದ್ದರು. ಶುಕ್ರವಾರ ತಡರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಶುಕ್ರವಾರ ತಡರಾತ್ರಿ 12:41ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಸಿಸಿಟಿವಿಯಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ. ಅಪಘಾತದ ಬಳಿಕ ಟಾಟಾ ಏಸ್ ವಾಹನ ಚಾಲಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.









