(ನ್ಯೂಸ್ ಕಡಬ) newskadaba.com ಮೇ. 14. ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಭಾರೀ ಚರ್ಚೆ ಹಾಗೂ ವಿವಾದಕ್ಕೆ ಕಾರಣವಾಗಿದ್ದ ಜನಿವಾರ ಮತ್ತು ಹಿಜಾಬ್ ಸೇರಿದಂತೆ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಸಮವಸ್ತ್ರ ವಿಚಾರವಾಗಿ 2022ರ ಆದೇಶ ಹಿಂಪಡೆದು ಹೊಸ ಆದೇಶ ಹೊರಡಿಸಲಾಗಿದೆ. ಸಮವಸ್ತ್ರ ಮತ್ತು ಶಿಸ್ತನ್ನು ಕಾಪಾಡುವ ಜೊತೆಗೆ, ತಾರತಮ್ಯವಿಲ್ಲದ ಮತ್ತು ಸಾಂವಿಧಾನಿಕವಾಗಿ ಸಮತೋಲಿತವಾದ ರೀತಿಯಲ್ಲಿ ಸೀಮಿತ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತವಾದ ಸಂಕೇತಗಳನ್ನು ಧರಿಸಲು ಅನುಮತಿಸುವ ಉದ್ದೇಶದಿಂದ 2022ರ ಆದೇಶವನ್ನು ಹಿಂಪಡೆದು ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಹೊಸ ನಿರ್ದೇಶನಗಳನ್ನು ನೀಡುವುದು ಅಗತ್ಯವೆಂದು ಸರ್ಕಾರವು ತೀರ್ಮಾನಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತವಾದ ಸಂಕೇತಗಳ ವಸ್ತ್ರಗಳಿಗೆ ಅವಕಾಶ ನೀಡಿ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಬಿಜೆಪಿ ಸರಕಾರ ಹೊರಡಿಸಿದ್ದ ಹಿಜಾಬ್ ನಿಷೇಧ ಆದೇಶವನ್ನು ಸರ್ಕಾರ ವಾಪಸ್ ಪಡೆದುಕೊಂಡಿದೆ.
ವಿದ್ಯಾರ್ಥಿಗಳು ಜನಿವಾರ, ಶಿವದಾರ, ರುದ್ರಾಕ್ಷಿ, ಪೇಟ, ತಲೆ ವಸ್ತ್ರ ಅಥವಾ ಹಿಜಾಬ್ ಇತರೆ ಯಾವುದೇ ಸ್ವರೂಪದ ಸಾಂಪ್ರದಾಯಿಕ ಸಂಕೇತವನ್ನು ನಿಗದಿಪಡಿಸಲಾದ ಸಮವಸ್ತ್ರ ಜೊತೆಗೆ ಧರಿಸಬಹುದು. ಸಾಂಪ್ರದಾಯಿಕ ಮತ್ತು ಪದ್ಧತಿ ಆಧಾರಿತ ಸಂಕೇತ ಸಮವಸ್ತ್ರಕ್ಕೆ ಪೂರಕವಾಗಿರಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತವಾದ ಸಂಕೇತಗಳ ವಸ್ತ್ರಗಳಿಗೆ ಅವಕಾಶ ಎಂದು ಹೊಸ ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ.













