(ನ್ಯೂಸ್ ಕಡಬ) newskadaba.com, ಮೇ.23: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದಿಪ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿಗಳಿಗೆ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ ಸ್ಪಷ್ಟನೆ ನೀಡಿದ್ದಾರೆ.
“ದರ್ಶನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿ ನನ್ನ ಗಮನಕ್ಕೆ ಬಂದ ತಕ್ಷಣವೇ ಕಾರಾಗೃಹದ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ಜೈಲಿನಲ್ಲಿ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇದರ ಹೊರತಾಗಿ ಬೇರೆ ಯಾವುದೇ ವಿಷಯ ಇಲ್ಲ” ಎಂದು ಗೃಹ ಸಚಿವರು ತಿಳಿಸಿದ್ದಾರೆ.
ಭಾನುವಾರ ರಾತ್ರಿಯಿಂದ ಸಾಮಾಜಿಕ ಜಾಲತಾಣಗಳಲ್ಲಿ ದರ್ಶನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿ ವೇಗವಾಗಿ ಹರಡಿತ್ತು. ಈ ಸುದ್ದಿ ಹಿನ್ನೆಲೆ ಸೋಮವಾರ ಬೆಳಗ್ಗಿನಿಂದಲೇ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಸುತ್ತಮುತ್ತ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಇದರ ಜೊತೆಗೆ ದರ್ಶನ್ ಅಭಿಮಾನಿಗಳಲ್ಲೂ ಭಾರೀ ಆತಂಕ ಮನೆಮಾಡಿದ್ದು, ಹಲವು ಕಡೆಗಳಲ್ಲಿ ಗೊಂದಲದ ವಾತಾವರಣ ಉಂಟಾಗಿತ್ತು. ಆದರೆ ಗೃಹ ಸಚಿವರ ಅಧಿಕೃತ ಸ್ಪಷ್ಟನೆ ಬಳಿಕ ವದಂತಿಗಳಿಗೆ ತೆರೆ ಬಿದ್ದಿದೆ.









