(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.24. ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರಕಾರದ ಪದಗ್ರಹಣ ಸಮಾರಂಭದ ಕೆಲವೇ ಕ್ಷಣಗಳಲ್ಲಿ ಕಾಂಗ್ರೆಸ್ ನಲ್ಲಿ ಅಸಮಾಧಾನದ ಹೊಗೆಯಾವರಿಸಿದೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರಕಾರ ರಚನೆಯ ಸೂತ್ರಧಾರ, ಕಾಂಗ್ರೆಸ್‌ನ ಕಿಂಗ್ ಮೇಕರ್ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡದಿರುವ ಹಿನ್ನೆಲೆಯಲ್ಲಿ ಪಕ್ಷದ ನಾಯಕರ ವಿರುದ್ಧ ಡಿ.ಕೆ. ಸಹೋದರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಶಾಸಕರನ್ನು ಬಿಜೆಪಿಯ ಆಪರೇಷನ್ ಕಮಲಕ್ಕೆ ಬಲಿಯಾಗದಂತೆ ಹಗಲು ರಾತ್ರಿ ಬಕಪಕ್ಷಿಯಂತೆ ಕಾದು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೇರಿಸಿದರೂ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡದೆ ಸತಾಯಿಸುತ್ತಿರುವುದರ ಬಗ್ಗೆ ತೀವ್ರ ನೊಂದಿರುವ ಡಿಕೆಶಿ, ತಾನು ಏನಿದ್ದರೂ ಚೆಸ್ ಆಡಿ ಚೆಕ್ ಇಡುವುದಾಗಿ ಪರೋಕ್ಷವಾಗಿ ನಾಯಕರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.
ಈ ನಡುವೆ ಡಿಕೆಶಿಯನ್ನು ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಸಮಾಧಾನಪಡಿಸಿದ್ದು, ಸಚಿವ ಸ್ಥಾನದೊಂದಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುವಂತೆ ಡಿ.ಕೆ.ಶಿವಕುಮಾರ್‌ಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಸಲಹೆ ನೀಡಿದ್ದಾರೆ.