(ನ್ಯೂಸ್ ಕಡಬ) newskadaba.com, : ರಾಜ್ಯದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ತೀರದ ಪ್ರಮುಖ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಈ ಭಾಗದಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
ಮಳೆಯ ಅವಧಿಯಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಸುರಕ್ಷತೆಯ ದೃಷ್ಟಿಯಿಂದ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.
ಜುಲೈ ಆರಂಭದಲ್ಲಿ ಮತ್ತಷ್ಟು ತೀವ್ರಗೊಳ್ಳಲಿರುವ ಮುಂಗಾರು
ಮುಂದಿನ ದಿನಗಳಲ್ಲಿ ಮುಂಗಾರು ಮಾರುತಗಳು ಮತ್ತಷ್ಟು ತೀವ್ರಗೊಳ್ಳಲಿವೆ. ಜೂನ್ ಅಂತ್ಯ ಹಾಗೂ ಜುಲೈ ಆರಂಭದ ದಿನಗಳಲ್ಲಿ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಹೆಚ್ಚಾಗಲಿದ್ದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಹವಾಮಾನ ಇಲಾಖೆ ಸೂಚಿಸಿದೆ.









