(ನ್ಯೂಸ್ ಕಡಬ) newskadaba.com, ಜೂ.30: ಸುಳ್ಯ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಕೆಳಭಾಗದಿಂದ ಸರ್ಕಾರಿ ಪದವಿಪೂರ್ವ ಕಾಲೇಜು ಕಡೆಗೆ ತೆರಳುವ ರಸ್ತೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸದೆ ರಸ್ತೆ ಕಾಂಕ್ರೀಟೀಕರಣ ಮಾಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಅವ್ಯವಸ್ಥೆಯಿಂದಾಗಿ ಅಪಘಾತಗಳು ಸಂಭವಿಸುವ ಭೀತಿ ಎದುರಾಗಿದ್ದು, ವಾಹನ ಸವಾರರು ಆತಂಕ ವ್ಯಕ್ತಪಡಿಸಿದ್ದಾರೆ.
ರಸ್ತೆ ಮಧ್ಯೆ ವಿದ್ಯುತ್ ಕಂಬ ಉಳಿಸಿಕೊಂಡೇ ಕಾಂಕ್ರೀಟ್ ಮಾಡಿರುವುದನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.ಈ ಕಾಮಗಾರಿ ಅತ್ಯಂತ ಅಪಾಯಕಾರಿಯಾಗಿದ್ದು, ತಕ್ಷಣವೇ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಶಾಸಕರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ರಸ್ತೆ ಮಧ್ಯದ ಕಂಬ ಸ್ಥಳಾಂತರಿಸದ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಅವರು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಾ.ಪಂ. ಇಒ ರಾಜಣ್ಣ ಅವರಿಗೆ ಸೂಚನೆ ನೀಡಿದ್ದಾರೆ.









