(ನ್ಯೂಸ್ ಕಡಬ) newskadaba.com, ಜು.03 ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ 2026-27ನೇ ಸಾಲಿನಲ್ಲಿ ಒಟ್ಟು 7,925 ಪೊಲೀಸ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಇಡೀ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಖಾಂತರ ಅತ್ಯಂತ ಪಾರದರ್ಶಕವಾಗಿ ನಡೆಸಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಈ ನೇಮಕಾತಿಯು ಡಿಟೆಕ್ಟಿವ್ ಸಬ್-ಇನ್‌ಸ್ಪೆಕ್ಟರ್, ನಾಗರಿಕ ಮತ್ತು ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್, ಹಾಗೂ ವಿಶೇಷ ಮೀಸಲು ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳನ್ನು ಒಳಗೊಂಡಿದೆ.ಒಟ್ಟು ಹುದ್ದೆಗಳಲ್ಲಿ 1,639 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ವಿಶೇಷ ಆದ್ಯತೆಯಡಿ ಮೀಸಲಿರಿಸಲಾಗಿದ್ದು, ಉಳಿದ ಹುದ್ದೆಗಳನ್ನು ರಾಜ್ಯದ ಇತರೆ ಭಾಗಗಳಿಗೆ ಹಂಚಿಕೆ ಮಾಡಲಾಗಿದೆ.
ನಾಗರಿಕ ಹಾಗೂ ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.ಈ ನೇಮಕಾತಿಯು ಇಲಾಖೆಯ ಮೂಲಸೌಕರ್ಯ ಆಧುನೀಕರಣ ಹಾಗೂ ಭದ್ರತಾ ಸವಾಲುಗಳನ್ನು ಎದುರಿಸಲು ಸರ್ಕಾರ ಕೈಗೊಂಡಿರುವ ಪ್ರಮುಖ ಹೆಜ್ಜೆಯಾಗಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.









