(ನ್ಯೂಸ್ ಕಡಬ) newskadaba.com, ಜು.09 : ರಾಜ್ಯದ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಕೊಡಗು ಹಾಗೂ ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಭೂಕುಸಿತ ಹಾಗೂ ಮರ ಉರುಳುವ ಘಟನೆಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗಿನ ಪ್ರಮುಖ ಪ್ರವಾಸಿ ತಾಣವಾದ ರಾಜಾಸೀಟ್ಗೆ ಜುಲೈ 10ರಿಂದ 12ರವರೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.
ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ತಲಕಾವೇರಿ ಹಾಗೂ ಭಾಗಮಂಡಲ ವ್ಯಾಪ್ತಿಯಲ್ಲಿ ಮಳೆ ಮುಂದುವರಿದಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿದೆ.ಮಡಿಕೇರಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪ ಅಲ್ಪ ಪ್ರಮಾಣದ ಭೂಕುಸಿತ ಸಂಭವಿಸಿದೆ.
ತಾತ್ಕಾಲಿಕ ಸಂಚಾರ ವ್ಯವಸ್ಥೆಯಿಂದಾಗಿ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಹಾಗೂ ರಾಜಾಸೀಟ್ ಬಳಿ ಪಾರ್ಕಿಂಗ್ ಸಮಸ್ಯೆ ತಲೆದೋರಲಿರುವ ಕಾರಣ ಜಿಲ್ಲಾಡಳಿತ ಪ್ರವಾಸಿಗರ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ ಹೇರಿದೆ.









