(ನ್ಯೂಸ್ ಕಡಬ) newskadaba.com, ಜು.14 : ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಶಿಕ್ಷಿತ ಕೈದಿಗಳು ನಸುಕಿನ ಜಾವ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೀದರ್ ಜಿಲ್ಲೆಯ ಕೊಲೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಮಸ್ತಾನ್, ಸಂತೋಷ್ ಹಾಗೂ ಸಾಗರ್ ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದಾರೆ.
ಪರಾರಿಯಾದ ಮೂವರೂ ಬೀದರ್ ಮೂಲದವರಾಗಿದ್ದು, ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು. ಇಂದು ಮುಂಜಾನೆ ಜೈಲಿನ ಭದ್ರತಾ ವ್ಯವಸ್ಥೆಯನ್ನು ಮೀರಿ ಗೋಡೆ ಹಾರಿ ತಪ್ಪಿಸಿಕೊಂಡಿರುವುದಾಗಿ ತಿಳಿದುಬಂದಿದೆ. ಘಟನೆ ಬೆಳಕಿಗೆ ಬಂದ ತಕ್ಷಣ ಜೈಲು ಆಡಳಿತ ಹಾಗೂ ಪೊಲೀಸರು ಪರಾರಿಯಾದ ಕೈದಿಗಳಿಗಾಗಿ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದಾರೆ. ವಿವಿಧ ಪೊಲೀಸ್ ಠಾಣೆಗಳಿಗೆ ಮಾಹಿತಿ ರವಾನಿಸಲಾಗಿದ್ದು, ಪ್ರಮುಖ ರಸ್ತೆಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ.
ಈ ಘಟನೆ ಹಿನ್ನೆಲೆಯಲ್ಲಿ ಜೈಲು ಸಿಬ್ಬಂದಿಯ ಪಾತ್ರದ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ. ಮಧ್ಯರಾತ್ರಿ ಲಾಕ್ಅಪ್ನಲ್ಲಿ ಇರಬೇಕಿದ್ದ ಕೈದಿಗಳು ಹೇಗೆ ಹೊರಬಂದರು ಎಂಬ ಪ್ರಶ್ನೆ ಉದ್ಭವಿಸಿದ್ದು, ಕೈದಿಗಳ ಪರಾರಿಯಲ್ಲಿ ಜೈಲು ಸಿಬ್ಬಂದಿ ಅಥವಾ ಅಧಿಕಾರಿಗಳ ನಿರ್ಲಕ್ಷ್ಯ ಅಥವಾ ಸಹಕಾರವಿದೆಯೇ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ. ಈ ಸಂಬಂಧ ಕಲಬುರಗಿಯ ಫರ್ತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜೈಲು ಸಿಬ್ಬಂದಿಯನ್ನು ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಪರಾರಿಯಾಗಿರುವ ಮೂವರು ಕೈದಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ.









