(ನ್ಯೂಸ್ ಕಡಬ) newskadaba.com ಜು. 21. ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ ಗರ್ಭಿಣಿಯಾಗಿರುವ ಪ್ರಕರಣದ ಸಂಬಂಧ ಬೆಳ್ತಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿರುವ ಕುರಿತು ವರದಿಯಾಗಿದೆ.
ಬಂಧಿತನನ್ನು ಉಪ್ಪಿನಂಗಡಿ ನಿವಾಸಿ ಶುಭರಾಜ್ ಎಂದು ಪೊಲೀಸರು ಗುರುತಿಸಲಾಗಿದೆ.
ವರದಿಯ ಪ್ರಕಾರ, ಬೆಳ್ತಂಗಡಿಯ 16 ವರ್ಷದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದ ಆರೋಪಿಯು, ಈ ವಿಷಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆಯೊಡ್ಡಿದ್ದ ಎನ್ನಲಾಗಿದೆ. ಇತ್ತೀಚೆಗೆ ಬಾಲಕಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಾಗ ಆಕೆಯ ತಾಯಿ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆಗೆ ಒಳಪಡಿಸಿದಾಗ ಬಾಲಕಿ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ.
ಈ ಸಂಬಂಧ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಜುಲೈ 18ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಜುಲೈ 19ರಂದು ಲಾಯಿಲ ಗ್ರಾಮದ ಪುತ್ರಬೈಲಿನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.









