(ನ್ಯೂಸ್ ಕಡಬ) newskadaba.com ,ಆ.06 ಕಡಬ: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ಚಾಲಕರ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಿದ್ದು, ಡ್ರಿಂಕ್ ಅಂಡ್ ಡ್ರೈವ್ ಪ್ರಕರಣಗಳಲ್ಲಿ ಸಿಕ್ಕಿಬಿದ್ದ ಚಾಲಕರ ಚಾಲನಾ ಪರವಾನಗಿಯನ್ನು 3 ತಿಂಗಳುಗಳ ಕಾಲ ಅಮಾನತುಗೊಳಿಸಲಾಗಿದೆ.
ಆರ್.ಟಿ.ಒ ಹಾಗೂ ಸಂಚಾರ ನಿಯಮಗಳ ಪ್ರಕಾರ, ಮದ್ಯಪಾನ ಸೇವಿಸಿ ಚಾಲನೆ ಮಾಡುವುದು ಗಂಭೀರ ಅಪರಾಧವಾಗಿದ್ದು, ರಸ್ತೆ ಸುರಕ್ಷತೆ ಹಾಗೂ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಕಡಬ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದರು. ಪರಿಶೀಲನೆ ವೇಳೆ ಮದ್ಯಸೇವನೆ ಮಾಡಿ ವಾಹನ ಚಲಾಯಿಸುತ್ತಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಚಾಲಕರ ಡಿಎಲ್ (DL) ಅನ್ನು ಮೂರು ತಿಂಗಳ ಅವಧಿಗೆ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಸಾರ್ವಜನಿಕರ ಜೀವ ರಕ್ಷಣೆ ಮತ್ತು ಸಂಚಾರ ನಿಯಮಗಳ ಪಾಲನೆ ಪ್ರತಿಯೊಬ್ಬ ವಾಹನ ಸವಾರರ ಕರ್ತವ್ಯವಾಗಿದೆ. ಯಾರಾದರೂ ನಿಯಮ ಉಲ್ಲಂಘಿಸಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ಅವರ ವಿರುದ್ಧ ಕಾನೂನು ರೀತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಮುಂದುವರಿಯಲಿದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.








