(ನ್ಯೂಸ್ ಕಡಬ) newskadaba.com ಸೆ. 02. ಮಂಗಳೂರು ಕೆಆರ್‌ಐಡಿಎಲ್ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್‌ಗಳು ಭ್ರಷ್ಟಾಚಾರ ನಡೆಸಿ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಶಾಸಕರು ಆರೋಪ ಮಾಡಿರುವ ಬೆನ್ನಲ್ಲೇ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಖಾತೆ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಇತ್ತೀಚೆಗೆ ಶಾಸಕ ಅಶೋಕ್ ಕುಮಾರ್ ರೈ ಅವರು ಈ ಸಂಬಂಧ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದರು. ಈ ಮೂಲಕ ಸಚಿವರ ಹೆಸರಲ್ಲೇ ಶೇ.7ರಷ್ಟು ಕಮಿಷನ್ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ್ದರು. ಇದನ್ನು ಸರಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಕೆಆರ್‌ಐಡಿಎಲ್‌ನ ಮಂಗಳೂರು ವಿಭಾಗದ ಕಾರ್ಯನಿರ್ವಾಹಕ ಮತ್ತು ಕಿರಿಯ ಇಂಜಿನಿಯರ್‌ಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆಯೇ?,ಶಾಸಕರು ಮಾಡಿರುವ ಆರೋಪದಲ್ಲಿ ಸತ್ಯಾಂಶವಿದೆಯೇ ಎಂಬ ಬಗ್ಗೆ ಸೂಪರಿಂಟೆಂಡೆಂಟ್ ಇಂಜಿನಿಯರ್ ದರ್ಜೆಯ ಅಧಿಕಾರಿ ನೇತೃತ್ವದ ತ್ರಿಸದಸ್ಯ ತಂಡದಿಂದ ತನಿಖೆಗೆ ಆದೇಶಿಸಿರುವ ಸಚಿವರು,ಒಂದೊಮ್ಮೆ ಭ್ರಷ್ಟಾಚಾರ ಮಾಡಿದ್ದು ಕಂಡುಬಂದಲ್ಲಿ ಅವರ ವಿರುದ್ಧ ಕೈಗೊಳ್ಳಬೇಕಾದ ಶಿಸ್ತು ಕ್ರಮದ ಶಿಫಾರಸಿನೊಂದಿಗೆ ವರದಿಯನ್ನು ಏಳು ದಿನಗಳ ಒಳಗಾಗಿ ಸಲ್ಲಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಉಸ್ತುವಾರಿ ಮತ್ತು ಇಲಾಖೆಯ ಸಚಿವರ ಹೆಸರಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯಾವುದೇ ಸಿಬ್ಬಂದಿಗಳು, ಅಧಿಕಾರಿಗಳು ಅಥವಾ ಇಂಜಿನಿಯರ್ ಗಳು ಹಣ ವಸೂಲಿ ಮಾಡಿದರೆ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.












