
(ನ್ಯೂಸ್ ಕಡಬ) newskadaba.com, ನ .04 . ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಮೂಡುಕೋಡಿಯ ಪಂಜಲ್ಬೈಲು ಎಂಬಲ್ಲಿ ಆಟೋ-ರಿಕ್ಷಾ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ 26 ವರ್ಷದ ಯುವಕ ಸಾವನ್ನಪ್ಪಿದ್ದಾರೆ.
ಮೃತರನ್ನು ಪೆರಾಡಿ ಗ್ರಾಮದ ಸ್ವಸ್ತಿಕ್ ಎಂದು ಗುರುತಿಸಲಾಗಿದೆ. ಇವರು ವೇಣೂರಿನ ಆಭರಣ ಮಳಿಗೆಯೊಂದರಲ್ಲಿ ಶಾಖಾ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ನ.3ರಂದು ಸಂಜೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ. ಮೃತರು ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಈ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




