
(ನ್ಯೂಸ್ ಕಡಬ) newskadaba.com, ನ 05. ಸುಳ್ಯ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳ ಪೂರ್ವಭಾವಿ ಸಭೆಯು ಸುಳ್ಯದ ಪಕ್ಷದ ಕಚೇರಿಯಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಅಬ್ದುಲ್ ಕಲಾಂ ಸುಳ್ಯ ವಹಿಸಿದ್ದರು. ಜಿಲ್ಲಾ ಸಮಿತಿಯ ಕಾರ್ಯದರ್ಶಿ ಅಶ್ರಫ್ ತಲಪಾಡಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.ಸಭೆಯಲ್ಲಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಪರಿಣಾಮಕಾರಿಯಾಗಿ ಎದುರಿಸುವುದು, ಚುನಾವಣಾ ಕಾರ್ಯತಂತ್ರ ರೂಪಿಸುವುದು, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಬಲಪಡಿಸುವುದು ಹಾಗೂ ಚುನಾವಣಾ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ಕೈಗೊಳ್ಳುವ ಕುರಿತು ಚರ್ಚಿಸಲಾಯಿತು. ಜಿಲ್ಲಾ ಅಧ್ಯಕ್ಷ ಅನ್ವರ್ ಸಾದತ್ ಅವರು ಚುನಾವಣಾ ಸಿದ್ಧತೆ ಮತ್ತು ಪಕ್ಷದ ವತಿಯಿಂದ ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತು ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಎಸ್ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಮಿರಾಝ್ ಸುಳ್ಯ, ಜಿಲ್ಲಾ ಚುನಾವಣಾ ಉಸ್ತುವಾರಿ ಸಿದ್ದಿಕ್ ಅಲೆಕ್ಕಾಡಿ ಉಪಸ್ಥಿತರಿದ್ದರು.ಸಭೆಯಲ್ಲಿ ಸುಳ್ಯ ಬ್ಲಾಕ್,ಬೆಳ್ಳಾರೆ ಬ್ಲಾಕ್ ಹಾಗೂ ಸವಣೂರು ಬ್ಲಾಕ್ಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಭಾಗವಹಿಸಿದ್ದರು.
ವಿಧಾನಸಭಾ ಕ್ಷೇತ್ರ ಚುನಾವಣಾ ಉಸ್ತುವಾರಿ ಶರೀಫ್ ನಿಂತಿಕಲ್ ಸ್ವಾಗತಿಸಿ ಕಾರ್ಯದರ್ಶಿ ಆರಿಫ್ ಅಂಕತಡ್ಕ ವಂದಿಸಿದರು. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿ, ಸಂಘಟಿತವಾಗಿ ಕಾರ್ಯನಿರ್ವಹಿಸುವ ಮೂಲಕ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.




