
(ನ್ಯೂಸ್ ಕಡಬ) newskadaba.com, ನ .24 . ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಅವರು ಜಾಮೀನು ಕೋರಿ ಇದೀಗ ಎರಡನೇ ಬಾರಿಗೆ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಸುಪ್ರೀಂಕೋರ್ಟ್ ಜಾಮೀನು ರದ್ದುಗೊಳಿಸಿದ ಬಳಿಕ, ಪವಿತ್ರಾ ಗೌಡ ಪರ ವಕೀಲ ನಾರಾಯಣಸ್ವಾಮಿ ಅವರು CrPC ಸೆಕ್ಷನ್ 439ರ ಅಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಿದ್ದಾರೆ. ಇಂದು (ನ. 24) ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರ ಏಕಸದಸ್ಯ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಲಿದೆ.
ಕಳೆದ ಒಂದು ವರ್ಷದಿಂದ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ವಿಚಾರಣೆ ಎದುರಿಸುತ್ತಿದ್ದಾರೆ. ಪ್ರಕರಣದ ಪ್ರತ್ಯಕ್ಷದರ್ಶಿಗಳುಈಗಾಗಲೇ ಪ್ರತಿಕೂಲ ಸಾಕ್ಷ್ಯ ನುಡಿಯುತ್ತಿದ್ದು, ವಿಚಾರಣೆ ವೇಳೆ ತಮ್ಮ ಕಕ್ಷಿದಾರರ ವಿರುದ್ಧ ಯಾವುದೇ ಬಲವಾದ ಆರೋಪಗಳು ಸಾಬೀತಾಗಿಲ್ಲ.
ಹೀಗಾಗಿ ಸೂಕ್ತ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.ಈ ಹಿಂದೆ ಸೆಪ್ಟೆಂಬರ್ 26ರಂದು ನಗರದ 59ನೇ ಸೆಷನ್ಸ್ ನ್ಯಾಯಾಲಯವು ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.




