
ಕರ್ನಾಟಕದ ಆಶಾ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಖಂಡಿತ ಪರಿಹಾರ ಒದಗಿಸಲಾಗುವುದು. ನನ್ನ ಮೇಲೆ ವಿಶ್ವಾಸವಿಟ್ಟು ಪ್ರತಿಭಟನೆ ಹಾಗೂ ನಿರಶನವನ್ನು ಕೈಬಿಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜಪಾನ್ನಿಂದಲೇ ಮನವಿ ಮಾಡಿದ್ದಾರೆ.ಜಪಾನ್ ಪ್ರವಾಸದಲ್ಲಿರುವ ಡಿಕೆಶಿ, ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವೀಡಿಯೊ ಕರೆ ಮೂಲಕ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಮುಖಂಡರೊಂದಿಗೆ ಮಾತನಾಡಿದರು.
ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ವಿವಿಧ ಇಲಾಖೆಗಳ ವ್ಯಾಪ್ತಿಗೆ ಬರುವ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲು ಸರ್ಕಾರ ಸಿದ್ಧವಿದೆ. ಇದಕ್ಕಾಗಿ ಅಧಿವೇಶನದವರೆಗೆ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು.
ಜಪಾನ್ ಪ್ರವಾಸದಿಂದ ವಾಪಸಾದ ಬಳಿಕ ಆಶಾ ಕಾರ್ಯಕರ್ತೆಯರನ್ನು ಖುದ್ದಾಗಿ ಭೇಟಿ ಮಾಡಿ ಮಾತುಕತೆ ನಡೆಸುವುದಾಗಿಯೂ ಭರವಸೆ ನೀಡಿದರು. ಪ್ರತಿಭಟನೆಯನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುವವರ ಮಾತಿಗೆ ಮರುಳಾಗಬೇಡಿ ಎಂದು ಇದೇ ವೇಳೆ ಎಚ್ಚರಿಕೆ ನೀಡಿದರು.




